ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮಾಹಿತಿ ಆಯೋಗದಲ್ಲಿ ನೂತನವಾಗಿ ನೇಮಕವಾಗಿರುವ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಪ್ರಮಾಣ ವಚನ ಸ್ವೀಕರಿಸಿದರೆ, ರಾಜ್ಯ ಮಾಹಿತಿ ಆಯುಕ್ತರುಗಳಾಗಿ ನೇಮಕವಾಗಿರುವ ಏಳು ಜನ ಅಧಿಕಾರಿಗಳಾದ ರಾಮನ್ ಕೆ., ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ. ಚೆನ್ನಾಳ್, ರಾಜಶೇಖರ್ ಎಸ್, ಬದ್ರುದ್ದೀನ್ ಕೆ. ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ. ಬಿ.ಆರ್.ಮಮತ ಅವರು ಮಂಗಳವಾರ ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಹಾಗೂ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಪ್ರಮಾಣವಚನ ಬೋಧಿಸಿದರು.
ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಎಚ್. ಎಂ. ರೇವಣ್ಣ,
ಬಿ.ಡಿ.ಎ. ಅಧ್ಯಕ್ಷ ಎನ್.ಎ. ಹ್ಯಾರಿಸ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ಮತ್ತಿತರ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.