ಚಂದ್ರವಳ್ಳಿ ನ್ಯೂಸ್, ಹಾಸನ:
ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಾಲ್ಕು ದಿನ ಮಾತ್ರ ಇದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ನೀಡುವ ಹಾಸನಾಂಬೆ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ.
ದರ್ಶನ ಭಾಗ್ಯ:
ಇದೇ ತಿಂಗಳ ಅಕ್ಟೋಬರ್- 9ಕ್ಕೆ ಹಾಸನಾಂಬೆ ದೇವಿಯ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಅ.23ರ ವರೆಗೂ ದೇವಿ ದರ್ಶನಕ್ಕೆ ಅವಕಾಶ ಇರುತ್ತದೆ.
ಒಟ್ಟು 15 ದಿನ ಹಾಸನಾಂಬ ದೇವಿಯ ದೇಗುಲದ ಬಾಗಿಲು ತೆರದಿರಲಿದೆ. ಮೊದಲ ಮತ್ತು ಕೊನೆಯ ದಿನ ಹೊರತುಪಡಿಸಿ 13 ದಿನ ಭಕ್ತರ ದರ್ಶನಕ್ಕೆ ಅವಕಾಶ ಇರುತ್ತದೆ.
ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಟಿಕೆಟ್ ಬುಕಿಂಗ್ ಇತ್ಯಾದಿ ಸೇವೆಗಳನ್ನು ವಾಟ್ಸ್ಆ್ಯಪ್ ಮೂಲಕವೇ ಒದಗಿಸುವ ವ್ಯವಸ್ಥೆ ಮಾಡಲಾಗಿದೆ.
ಅ.9 ಅಂದರೆ ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12 ಗಂಟೆ ನಂತರ ಅರಸು ವಂಶಸ್ಥರು ಬನ್ನಿ ಕಡಿದ ಬಳಿಕ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ.
ಮೊದಲ ದಿನ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬಾಗಿಲು ತೆರೆದ ನಂತರ ಗರ್ಭಗುಡಿ ಸ್ವಚ್ಛತಾ ಕಾರ್ಯ ಮಾಡಲಾಗುವುದು. ಮಾರನೇ ದಿನ ಬೆಳಗ್ಗೆ 5 ಗಂಟೆಯಿಂದ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ದರ್ಶನಕ್ಕೆ ಡಿಜಿಟಲ್ ಸ್ಪರ್ಶ:
ಹಾಸನಾಂಬೆಯ ದರ್ಶನೋತ್ಸವಕ್ಕೆ ಭಕ್ತರಿಗಾಗಿ ಆಡಳಿತ ಮಂಡಳಿ ವಾಟ್ಸ್ಆ್ಯಪ್ ಚಾಟ್ ಮೂಲಕ ಆನ್ಲೈನ್ ನೆರವು ನೀಡುವ ಯೋಜನೆ ಹಮ್ಮಿಕೊಂಡಿದೆ. ಟಿಕೆಟ್ ಬುಕಿಂಗ್, ದರ್ಶನ ಸಮಯ, ಸರತಿ ಸಾಲುಗಳ ಸ್ಥಿತಿಗತಿ, ಇ-ಹುಂಡಿ ಸೇರಿ ಹಲವು ಮಾಹಿತಿ ಆನ್ಲೈನ್ ಮೂಲಕ ಲಭ್ಯವಾಗಲಿದೆ. 6366105589 ನಂಬರ್ಗೆ ಮೆಸೇಜ್ ಮಾಡಿದರೆ ನಿಮ್ಮ ದರ್ಶನ ಯಾವ ದಿನ, ಎಷ್ಟು ಗಂಟೆಗೆ ದರ್ಶನ ಎನ್ನುವ ಮಾಹಿತಿಯೂ ಅಂತರ್ಜಾಲದಲ್ಲಿ ತಿಳಿಯಲಿದೆ. ಈ ಬಾರಿ ದೇವಿ ದರ್ಶನದ ಜೊತೆಗೆ ಟೂರ್ ಪ್ಯಾಕೇಜ್, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ಯೋಜನೆ ಹಮ್ಮಿಕೊಳ್ಳಲಾಗಿದೆ.
13 ದಿನ ದರ್ಶನ ಭಾಗ್ಯ:
ಹಾಸನಾಂಬೆ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ಅನಾನುಕೂಲ ಆಗದಿರಲಿ ಎನ್ನುವ ಕಾರಣಕ್ಕೆ ಉತ್ತಮ ವ್ಯವಸ್ಥೆ ಮಾಡಲಾಗುತ್ತಿದೆ. ಗಣ್ಯರಿಗಾಗಿ ವಿಶೇಷ ಸಾಲು, ವಿಶೇಷ ದರ್ಶನಕ್ಕೆ ಹಣ ಕೊಟ್ಟು ಬರುವ ಭಕ್ತರಿಗೆ ಪ್ರತ್ಯೇಕ ಸರತಿ ಸಾಲು, ಹೀಗೆ ಯಾವ ಭಕ್ತರಿಗೂ ಸಮಸ್ಯೆ ಆಗದಂತೆ ದರ್ಶನ ಮಾಡಲು ಬೇಕಾದ ವ್ಯವಸ್ಥೆಗಳ ನಿರ್ಮಾಣ ಕಾರ್ಯ ಶುರುವಾಗಿದೆ.
ಕಳೆದ ಬಾರಿ 15 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಮಾಡಿದ್ದು, ಈ ಬಾರಿ ಮತ್ತಷ್ಟು ಭಕ್ತವೃಂದ ಆಗಮಿಸುವ ಸಾಧ್ಯತೆಯಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ದೇವಾಲಯದ ಆಡಳಿತ ಮಂಡಳಿ ದೇವಾಲಯದ ಸುತ್ತಲು ಬ್ಯಾರಿಕೇಡ್ ಅಳವಡಿಕೆ, ಟೆಂಟ್ ನಿರ್ಮಾಣ, ಸಿಸಿ ಕ್ಯಾಮೆರಾ ಅಳವಡಿಕೆಯಂತ ಕಾರ್ಯ ಆರಂಭಿಸಿದೆ.
ಟೂರ್ ಪ್ಯಾಕೇಜ್ : ದೇವಿ ದರ್ಶನದ ಜೊತೆಗೆ ಟೂರ್ ಪ್ಯಾಕೇಜ್, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ಯೋಜನೆ ಹಮ್ಮಿಕೊಳ್ಳಲಾಗಿದೆ. ಹಾಸನಾಂಬೆ ಮತ್ತು ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ತ ಈಗಾಗಲೇ ಜಿಲ್ಲಾ ಉಸ್ತುವಾರಿ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಪೂರ್ವ ತಯಾರಿಯೊಂದಿಗೆ ಭರದಿಂದ ಸಿದ್ಧತೆ ಸಾಗಿದೆ. ಈಗಾಗಲೇ ದೇವಸ್ಥಾನಕ್ಕೆ ಬಣ್ಣ ಬಳಿಯುವ ಕಾರ್ಯ ಪೂರ್ಣಗೊಂಡು, ಆಹ್ವಾನ ಪತ್ರಿಕೆಗಳ ಹಂಚಿಕೆ ಕಾರ್ಯವೂ ನಡೆಯುತ್ತಿದೆ.
ಹಾಸನ ನಗರದ ಹಲವೆಡೆ ಸ್ವಾಗತ ಕಮಾನು, ಇಡೀ ನಗರದಾದ್ಯಂತ ಲೈಟಿಂಗ್, ಎಲ್ಇಡಿ ಅಳವಡಿಕೆ, ರಸ್ತೆ ಗುಂಡಿ ಮುಚ್ಚುವ ಕಾರ್ಯ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಬ್ಯಾರಿಕೇಡ್, ಮ್ಯಾಟ್ ಸೇರಿದಂತೆ ಬರುವ ಭಕ್ತರಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ.
ಜಿಲ್ಲಾಡಳಿತ, ಪೊಲೀಸ್ ಇಲಾಖೆ ನೂಕುನುಗ್ಗಲು ಆಗದಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ. ವಿಶೇಷ ದರ್ಶನಕ್ಕೆ ಬರುವಂತಹ ಭಕ್ತರಿಗೆ 300 ರೂ. ಹಾಗೂ 1000 ರೂ. ಪಾಸ್ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ವಿಐಪಿ, ವಿವಿಐಪಿ ಪಾಸ್ಗಳನ್ನು ರದ್ದು ಮಾಡಿದ್ದು ಗೋಲ್ಡ್ ಪಾಸ್ ಜಾರಿಗೆ ತರಲಾಗಿದೆ. ಒಂದು ಪಾಸ್ಗೆ ಒಬ್ಬರಿಗೆ ಮಾತ್ರ ಅವಕಾಶವಿದ್ದು, ದಿನದಲ್ಲಿ ಎರಡು ಗಂಟೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ದರ್ಶನಕ್ಕೆ ಬರುವ ವೃದ್ಧರು ಮತ್ತು ಅಂಗವಿಕಲರನ್ನು ದೇವರ ದರ್ಶನಕ್ಕೆ ಕರೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಸುಗಮ ದರ್ಶನಕ್ಕಾಗಿ ಜನದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಬ್ಯಾರಿಕೇಡ್ ವ್ಯವಸ್ಥೆ, ಜರ್ಮನ್ ಟೆಂಟ್, ನೆಲಕ್ಕೆ ಮ್ಯಾಟ್, 100ಕ್ಕೂ ಹೆಚ್ಚು ಶೌಚಾಲಯಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಬರುವ ಭಕ್ತರಿಗೆ ದೇವಿ ದರ್ಶನದ ಜೊತೆಗೆ ಟೂರಿಸಂ ವ್ಯವಸ್ಥೆ ಮಾಡಲಾಗಿದೆ.

