ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಕುಟುಂಬಸ್ಥರಿಗೆ ಅಕ್ರಮವಾಗಿ ನಿವೇಶನ ಪಡೆದಿದ್ದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 28ಕ್ಕೆ ನಿಗದಿಪಡಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಪೀಠದಲ್ಲಿ ಅರ್ಜಿದಾರರ ಪರ ವಕೀಲರು, ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಶನಿವಾರಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಶನಿವಾರ ನ್ಯಾಯಪೀಠದ ಕಲಾಪ ಇಲ್ಲ. ಹೀಗಾಗಿ, ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು.
ಆಗ ನ್ಯಾಯಪೀಠವು ವಕೀಲರ ಮನವಿ ಪುರಸ್ಕರಿಸಿ ವಿಚಾರಣೆಯನ್ನು ಏಪ್ರಿಲ್ 28ಕ್ಕೆ ನಿಗದಿಪಡಿಸಿ ಆದೇಶಿಸಿತು.
ಏನಿದು ಪ್ರಕರಣ:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರನ್ನು ಆಧರಿಸಿ ತನಿಖೆ ನಡೆಸಲು ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಕಲಂ 17ಎ ಅಡಿ ಅನುಮತಿ ನೀಡಿದ್ದರು.
ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ಪೀಠವು ರಾಜ್ಯಪಾಲರ ಕ್ರಮ ಎತ್ತಿಹಿಡಿದು ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಮತ್ತಿತರರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು ಇದರ ವಿಚಾರಣೆ ಏಪ್ರಿಲ್ 28ಕ್ಕೆ ನಿಗದಿ ಮಾಡಿ ಹೈಕೋರ್ಟ್ ಆದೇಶ ಮಾಡಿದೆ.