ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಸಾರ್ವಜನಿಕರ ಬೆಂಬಲ ಹಾಗೂ ಸಹಕಾರ ಅಗತ್ಯವಾಗಿ ಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು (ಮುರುಘರಾಜೇಂದ್ರ ಕ್ರೀಡಾಂಗಣ) ದಲ್ಲಿ ಜಿಲ್ಲಾಡಳಿತ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಚಿತ್ರದುರ್ಗ ಹಾಗೂ ಶಿವಮೊಗ್ಗ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದಾಗ್ಯೂ ಸಹ ಸಾರ್ವಜನಿಕರ ಸಹಕಾರ ಹಾಗೂ ಭಾಗವಹಿಸುವಿಕೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಮಾಲಿನ್ಯ ಮುಕ್ತ ಕರ್ನಾಟಕಕ್ಕಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪಣತೊಟ್ಟಿದೆ. ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಸ್ಮರಣೆ ಮಾಡಬೇಕಾಗುತ್ತದೆ. ಮಾಲಿನ್ಯ ನಿಯಂತ್ರಣಕ್ಕಾಗಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಇಂದಿರಾಗಾಂಧಿ ಅವರು ದೇಶದಲ್ಲಿ ಕ್ರಾಂತಿ ಉಂಟು ಮಾಡಿದರು ಎಂದು ತಿಳಿಸಿದ ಅವರು, ಮಾಲಿನ್ಯ ನಿಯಂತ್ರಣ ಮಾಡುವ ಸಹಕಾರಕ್ಕೆ ಸಾರ್ವಜನಿಕರು ಅಗತ್ಯ ಬೆಂಬಲ ನೀಡಬೇಕು ಎಂದು ಹೇಳಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅವರು, ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೊಸ ರೂಪ ಕೊಟ್ಟ ಕ್ರಿಯಾಶೀಲ ವ್ಯಕ್ತಿಯಾಗಿದ್ದು, ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ನಮ್ಮ ಪೀಳಿಗೆಗೆ ಕೇವಲ ಆಸ್ತಿ ಮಾಡಿ ಇಡುವುದು ಅಲ್ಲ, ಉತ್ತಮ ಪರಿಸರವನ್ನೂ ಅವರಿಗೆ ನೀಡಬೇಕಿದೆ. ವನ್ಯ ಜೀವಿ ಸಂರಕ್ಷಣಾ ಕಾಯಿದೆ ಇದ್ದರೂ ಪ್ರತಿ ನಿತ್ಯ ಅರಣ್ಯ ನಾಶವಾಗುತ್ತಿದೆ. ಅರಣ್ಯ ನಾಶವನ್ನು ತಡೆಯದಿದ್ದರೆ ಮತ್ತು ವಾಯು ಗುಣಮಟ್ಟವನ್ನು ಹೆಚ್ಚಿಸದಿದ್ದರೆ ನಮ್ಮ ಮುಂದಿನ ತಲೆಮಾರಿಗೆ ವಿಷ ಕೊಟ್ಟಂತಾಗುತ್ತದೆ ಎಂದು ತಿಳಿಸಿದರು.
ಒಂದು ಕಡೆ ಕಾಡು ನಾಶವಾಗುತ್ತಿದೆ. ಇನ್ನೊಂದೆಡೆ ಗಣಿಗಾರಿಕೆ ಮತ್ತು ಕೈಗಾರಿಕೆಗಳು ಹೆಚ್ಚಾಗುತ್ತಿವೆ. ಕೈಗಾರಿಕೆಗಳ ರಾಸಾಯನಿಕಯುಕ್ತ ನೀರು ನದಿಗಳಿಗೆ ಸೇರಿ ಜಲ ಮಾಲಿನ್ಯ ಕೂಡ ಆಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಡಳಿತದ ಸಹಕಾರ ಇಲ್ಲದೆ ಮಾಲಿನ್ಯ ನಿಯಂತ್ರಣ ಸಾಧ್ಯವಿಲ್ಲ. ಹಾಗೆಯೇ ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಕಾರ ಕೂಡ ಅತಿ ಮುಖ್ಯ. ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಳೀಯ ಆಡಳಿತ ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಪರಿಸರ ಸಂರಕ್ಷಣೆಗಾಗಿ ಕೆಲಸ ಮಾಡಲು ಸನ್ನದ್ಧವಾಗಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ, 1974ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುನ್ನುಡಿ ಬರೆದರು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷ ಪೂರೈಸಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವುದು ಸುವರ್ಣ ಮಹೋತ್ಸವದ ಗುರಿಯಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.
ಇಂದಿರಾ ಗಾಂಧಿ ಅವರು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆಗಳನ್ನು ಜಾರಿಗೆ ತಂದರು. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಅದೇ ವರ್ಷ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳ ಪ್ರಭೇದಗಳನ್ನು ರಕ್ಷಿಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ – 1972 ಅನ್ನು ಜಾರಿಗೆ ತಂದರು. 1973ರಲ್ಲಿ ಅಳಿವಿನಂಚಿನಲ್ಲಿರುವ ಹುಲಿಗಳನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಪ್ರಾಜೆಕ್ಟ್ ಟೈಗರ್ ಎಂಬ ವನ್ಯಜೀವಿ ಸಂರಕ್ಷಣಾ ಯೋಜನೆಯನ್ನು ರೂಪಿಸಿದರು.
1974ರಲ್ಲಿ ಜಲ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದರು. ಅದೇ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. 1981ರಲ್ಲಿ ವಾಯು ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ ಜಾರಿಗೆ ತಂದರು. ಸುವರ್ಣ ಮಹೋತ್ಸವದ ವೇಳೆ ಈ ಕಾಯಿದೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ ಎಂದು ನರೇಂದ್ರಸ್ವಾಮಿ ಅವರು ವಿವರಿಸಿದರು.
1972ರಲ್ಲಿ ವಿಶ್ವಸಂಸ್ಥೆಯ ಸ್ಟಾಕ್‍ಹೋಮ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ್ದ ಇಂದಿರಾ ಗಾಂಧಿ ಅವರು ಇಡೀ ಜಗತ್ತಿಗೆ ಮೊದಲ ಬಾರಿಗೆ ಪರಿಸರ ಸಂರಕ್ಷಣೆಯ ಪಾಠ ಮಾಡಿದರು. ಹಾಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ವೇಳೆ ಇಂದಿರಾ ಗಾಂಧಿ ಅವರ ಕೊಡುಗೆಗಳನ್ನು ಸ್ಮರಿಸಿಕೊಳ್ಳಬೇಕಾದುದು ಮತ್ತು ಅವರು ತಂದ ಕಾಯಿದೆಗಳ ಬಗ್ಗೆ ತಿಳಿದುಕೊಳ್ಳುವುದು ಕೂಡ ನಮ್ಮ ಕರ್ತವ್ಯ ಎಂದು ಹೇಳಿದರು.
ರಾಜ್ಯದ 15 ಕಡೆ ಸುವರ್ಣ ಮಹೋತ್ಸವದ ಬೃಹತ್ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆಯಾದರೂ ರಾಜ್ಯದ ಎಲ್ಲಾ ಜಿಲ್ಲೆಗಳನ್ನೂ ಒಳಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶಗಳಿಂದ ಹಿಡಿದು, ತಾಲೂಕು, ಜಿಲ್ಲೆ ಸೇರಿದಂತೆ ರಾಜ್ಯ ಮಟ್ಟದವರೆಗೆ ಏಕ ಕಾಲಕ್ಕೆ ದೊಡ್ಡ ಪ್ರಮಾಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಹಾಗು ಮಾಲಿನ್ಯ ನಿಯಂತ್ರಣ ಮಾಡಬೇಕಾದ ಅಗತ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಅವರಿಗೆ ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ವಿಧಾನಸಭಾ ಕ್ಷೇತ್ರವಾರು ನಡೆಯುತ್ತಿರುವ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 3 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡುವುದರಲ್ಲಿ ಯುವಕರ ಪಾತ್ರ ಬಹಳ ಮಹತ್ವದ್ದು ಎಂದು ಪರಿಗಣಿಸಿ ‘ಪರಿಸರದ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ’ ಎಂಬ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪರಿಸರ ಕಾಳಜಿ, ಸಂರಕ್ಷಣೆಯ ಸಂದೇಶ ಸಾರುವ ಉತ್ತಮ ರೀಲ್ಸ್ ಗೆ 50 ಸಾವಿರ ರೂಪಾಯಿ ಪ್ರಥಮ ಬಹುಮಾನ, 25 ಸಾವಿರ ರೂಪಾಯಿ ದ್ವಿತೀಯ ಬಹುಮಾನ ಹಾಗು 10 ಸಾವಿರ ರೂಪಾಯಿ ತೃತೀಯ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಾರ್ವಜನಿಕರ ಹಾಗೂ ಸಂಘ ಸಂಸ್ಥೆಗಳ ಸಹಕಾರ ಕೂಡ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪರಿಸರ ಉಳಿವಿಗಾಗಿ ಹಾಗೂ ಮಾಲಿನ್ಯ ನಿಯಂತ್ರಣಕ್ಕಾಗಿ ಎಲೆ ಮರೆಯ ಕಾಯಿಗಳಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳನ್ನು ಗುರುತಿಸಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗಿದೆ ಎಂದು ಹೇಳಿದರು.
ಹಸಿರು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಾದ ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಮಾತನಾಡಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ಹಮ್ಮಿಕೊಂಡು ಪರಿಸರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ನೀರು, ವಾಯು, ಅಗ್ನಿ, ಪರಿಸರ ನೈಸರ್ಗಿಕ ಕೊಡುಗೆಗಳಾಗಿದ್ದು, ಇವುಗಳು ಇಲ್ಲದಿದ್ದರೆ ಯಾವ ಜೀವಿಯೂ ಬದುಕಲು ಸಾಧ್ಯವಿಲ್ಲ. ಭೂಮಿ ಮತ್ತು ಆಕಾಶ ಕಲುಷಿತಗೊಂಡಿದ್ದರೆ ನಮ್ಮನ್ನು ನಾವು ವಿನಾಶದ ಅಂಚಿಗೆ ತಲುಪುತ್ತೇವೆ. ಪರಿಸರ ಆಮ್ಲಜನಕ ಉಳಿಯಲು ಹಸಿರು ಸಿರಿಮಾಲೆ ಬದುಕಬೇಕು. ಹಾಗಾಗಿ ವನಮಹೋತ್ಸವ ನಿರಂತರವಾಗಿ ಮಾಡಬೇಕು. ಮುಂದಿನ ಪೀಳಿಗೆಗೆ ಪರಿಸರ ಉಳಿಸಬೇಕು ಎಂದರು.
ಪರಿಸರ ಸಂರಕ್ಷಣೆ ಸಂವಿಧಾನದ ಪರಿಕಲ್ಪನೆ ಹಾಗೂ ಮೂಲಭೂತ ಕರ್ತವ್ಯವಾಗಿದೆ ಎಂದು ತಿಳಿಸಿದ ಅವರು, ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರ ಉಳಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗಳಾದ ಹೆಚ್‍ಎಸ್‍ಕೆ ಸ್ವಾಮಿ, ಸಿದ್ದರಾಜು ಜೋಗಿ ಹಾಗೂ ಚಿತ್ರದುರ್ಗ ಜಿಲ್ಲೆಯ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯ ಮಾಲತೇಶ ಅರಸ್ ಎಲ್.ವಿ ಮತ್ತು ಶಿವಮೊಗ್ಗ ಜಿಲ್ಲೆಯ ಡಿ.ಆರ್.ಕುಮಾರಸ್ವಾಮಿ, ಪಿ.ಎಸ್.ಮಹದೇವಸ್ವಾಮಿ, ಮುಖಾಮುಖಿ ಎಸ್.ಕೆ. ರಂಗ ತಂಡದ ಮಂಜುನಾಥ ಸ್ವಾಮಿ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೂ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂವಿಧಾನ ಪೀಠಿಕೆಯನ್ನು ಇದೇ ಸಂದರ್ಭದಲ್ಲಿ ಸಾಮೂಹಿಕವಾಗಿ ವಾಚನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಎಸ್.ಲಿಂಗರಾಜು, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಮುಖ್ಯ ಪರಿಸರ ಅಧಿಕಾರಿ ವಿಜಯ್ ಕುಮಾರ್, ಹಿರಿಯ ಪರಿಸರ ಅಧಿಕಾರಿ ರಮೇಶ್ ನಾಯ್ಕ್, ಪರಿಸರ ಅಧಿಕಾರಿ ಆಸಿಫ್ ಖಾನ್ ಸೇರಿದಂತೆ ಮತ್ತಿತರರು ಇದ್ದರು.

