ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದ್ದು ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಬೇಕು ಎಂದು ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು ನಿವಾಸಿಗಳು ಮನವಿ ಮಾಡಿದ್ದಾರೆ.
ಆಲೂರು ಗ್ರಾಮದ ಉಪ್ಪಾರ ಕಾಲೋನಿ, ಮುಸ್ಲಿಂ ಕಾಲೋನಿ ಮತ್ತು ಭೋವಿ ಕಾಲೋನಿಗಳ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸಮರ್ಪಕವಾಗಿ ನೀರು ಪೂರೈಕೆ ಮಾಡುತ್ತಿಲ್ಲ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಗ್ರಾಪಂ ಅಧ್ಯಕ್ಷ, ಸದಸ್ಯರು ಸೇರಿದಂತೆ ಸರ್ಕಾರದ ವಿವಿಧ ಹಂತದ ಅಧಿಕಾರಿಗಳನ್ನು ಭೇಟಿ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ ಎಂದು ಕೇಳಿಕೊಂಡಿದ್ದರೂ ಏನು ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರಿದರು.
ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಆದರೂ ಈ ಮೂರು ಕಾಲೋನಿಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡುತ್ತಿಲ್ಲ.
ಅಧಿಕಾರಿಗಳು ಸ್ಥಳೀಯ ಪರಿಸ್ಥಿತಿ ಆಧರಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು, ನಿಯಮಿತವಾಗಿ ನೀರು ಪರೀಕ್ಷಿಸಬೇಕು ಮತ್ತು ಜನರಿಗೆ ಶುದ್ಧ ನೀರು ತಲುಪಿಸಬೇಕು ಎಂದು ಅವರು ಒತ್ತಾಯಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಂಜಿನಿಯರ್ಗಳು ಸಭೆ ನಡೆಸಿ ಸ್ಥಳ ಪರಿಶೀಲಿಸಿ ನೀರಿನ ಸಮಸ್ಯೆ ಪರಿಹರಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡಬೇಕು, ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಬೇಕು ಮತ್ತು ನೀರಿನ ಮೂಲಗಳನ್ನು ಸ್ವಚ್ಛಗೊಳಿಸಬೇಕು.
ನೀರಿನ ಸಮಸ್ಯೆಯಾಗುವ ಗ್ರಾಮದ ಕಾಲೋನಿಗಳಲ್ಲಿ ಶಾಶ್ವತ ನೀರಾವರಿ ಯೋಜನೆಗಳನ್ನು ರೂಪಿಸಬೇಕು ಎಂದು ಆಲೂರು ಗ್ರಾಮದ ಆರ್.ರಂಗಸ್ವಾಮಿ, ಉಮಾದೇವಿ, ಲಕ್ಷ್ಮಿ, ಕೆಂಚಪ್ಪ, ಆರ್.ನಂದಿನಿ, ಹಂಸ, ನಂದೀಶ್, ರಾಕೇಶ್, ಮಂಗಳಮ್ಮ, ಬಸಮ್ಮ, ಶ್ರೀನಿವಾಸ್, ಮಂಜುಳ, ಅನುರಾಧ ಸೇರಿದಂತೆ ಮತ್ತಿತರರು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

