ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ನಡೆದ ರಾಜ್ಯ ಮಟ್ಟದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಣಗಲಪುರ ಗ್ರಾಮದ ರಾಮ್, ಕೆ.ರಾಮಾಂಜಿನಪ್ಪ ಅವರು ಪ್ರಥಮ ಸ್ಥಾನ ಪಡೆದು ತಾಲ್ಲೂಕಿಗೆ ಕೀರ್ತಿಯನ್ನು ತಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ ಬೆಂಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ಸೆಪ್ಟೆಂಬರ್ 25 ಮತ್ತು 26 ರಂದು ರಾಜ್ಯ ಮಟ್ಟದ ಸ್ಪರ್ಧೆ ನಡೆಯಿತು.
ರಾಜ್ಯದ 35 ಜಿಲ್ಲೆಗಳಿಂದ 70 ಕ್ರೀಡಾಪಟುಗಳು ಭಾಗವಹಿಸಿದ ಕಠಿಣ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆಯ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆ ಹೀರೆಹಳ್ಳಿಯನ್ನು ಪ್ರತಿನಿಧಿಸಿದ ರಾಮ್, ಒಂದು ನಿಮಿಷದೊಳಗೆ ಓಟ ಪೂರ್ಣಗೊಳಿಸಿ ದಾಖಲೆ ಬರೆದಿದ್ದಾರೆ. ಅವರ ಸಾಧನೆ ರಾಜ್ಯಕ್ಕೆ, ತುಮಕೂರು ಜಿಲ್ಲೆಗೆ ಮಾತ್ರವಲ್ಲದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರಕ್ಕೂ ಹೆಮ್ಮೆ ತಂದುಕೊಟ್ಟಿದೆ.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಗಿರೀಶ್ ಕೂಡ ತಮ್ಮ ಪ್ರತಿಭೆಯನ್ನು ತೋರಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಸಂಘಟಕರು ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
ಗ್ರಾಮಸ್ಥರು ಹಾಗೂ ಶಾಲಾ ಶಿಕ್ಷಕರು ರಾಮ್ ಅವರ ಸಾಧನೆಯನ್ನು ಪ್ರಶಂಸಿಸಿ, ಈ ಗೆಲುವು ಗ್ರಾಮೀಣ ಪ್ರತಿಭೆಯನ್ನು ಅನಾವರಣ ಗೊಳಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

