ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡಿರುವ ಡಿಟಿ. ಶ್ರೀನಿವಾಸ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಚಂದ್ರ ಕಸವನಹಳ್ಳಿ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಎಂಎಲ್ಸಿ ಡಿಟಿ ಶ್ರೀನಿವಾಸ್ ಅವರು ಉತ್ಸಾಹಿಗಳು, ಶಿಕ್ಷಣ ಪ್ರೇಮಿಗಳು ಹಾಗೂ ಬಡವರ ಪರವಾಗಿ ಕಾಳಜಿ ಹೊಂದಿದ್ದಾರೆ. ಅಲ್ಲದೆ ಪತ್ನಿ ಕೆ. ಪೂರ್ಣಿಮಾ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಪತ್ನಿಯ ಬೆನ್ನೆಲುಬಿಗೆ ನಿಂತು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.
ಅಲ್ಲದೆ ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಸಮುದಾಯಗಳ ಅಭಿವೃದ್ಧಿಗಾಗಿ ಪ್ರವಾಸ ಮಾಡುತ್ತಿದ್ದಾರೆ. ಜೊತೆಗೆ ಗೊಲ್ಲ ಸಮುದಾಯದ ನಾಯಕರಾಗಿದ್ದಾರೆ.
ಚಿತ್ರದುರ್ಗ, ತುಮಕೂರು, ಹಾಸನ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ಗೊಲ್ಲ ಸಮುದಾಯ ಜನಸಂಖ್ಯೆ ಹೆಚ್ಚಿದೆ.

ಅಲೆಮಾರಿಗಳಾಗಿರುವ ಗೊಲ್ಲ ಸಮುದಾಯಕ್ಕೆ ಸಾಮಾಜಿಕ ನ್ಯಾಯದಡಿಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

