ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲು ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅವರ ಮೂಲಕ ವಸತಿ ಸಹಿತ ತರಬೇತಿ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
8ನೇ ತರಗತಿ ವಿದ್ಯಾರ್ಹತೆ ಹೊಂದಿದ 20 ರಿಂದ 45 ವರ್ಷ ವಯೋಮಿತಿಯವರಿಗೆ ಮಲ್ಟಿ ಕ್ಯೂಸಿನ್ ಕುಕ್ಗೆ ಸಂಬಂಧಿಸಿದಂತೆ 5 ತಿಂಗಳ ತರಬೇತಿ ಪಡೆಯಲು ಇಚ್ಚಿಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 19 ರಿಂದ ನಗರದ ಕೋಟೆ ಮುಂಭಾಗದ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ–ಪ್ರತಿಯಲ್ಲಿ ಮಾರ್ಚ್ 29ರ ಸಂಜೆ 4.30ರೊಳಗೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.