ಪರಿಹಾರ ಪ್ರಾಧಿಕಾರ ರಚನೆ: ಡಿ.ಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿದರು.

ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಪುನಶ್ಚೇತನ ಕಾರ್ಯಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರಕರಣಗಳಿರುವ ಕಾರಣ, ನಾವು ಈ ವಿಚಾರದಲ್ಲಿ ಹೊಸ ನೀತಿ ರೂಪಿಸಲು ತೀರ್ಮಾನಿಸಿದ್ದೇವೆ. ಈ ವಿಚಾರವಾಗಿ ಸ್ಥಳೀಯ ನಾಯಕರು, ರೈತರ ಅಭಿಪ್ರಾಯ ಪಡೆಯಲಾಗುವುದು. ನ್ಯಾಯಯುತ ಪರಿಹಾರ, ಭೂಸ್ವಾಧೀನ ಪಾರದರ್ಶಕತೆ ಹಕ್ಕು ಕಾಯ್ದೆಯ ಸೆಕ್ಷನ್ 51ರ ಅಡಿಯಲ್ಲಿ ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ ರಚಿಸಲು ಅವಕಾಶವಿದೆ.

- Advertisement - 

ಹೀಗಾಗಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಈ ಪ್ರಾಧಿಕಾರವನ್ನು ರಚಿಸಲಿದೆ. ಮುಖ್ಯನ್ಯಾಯಮೂರ್ತಿಗಳು ನೇಮಕ ಮಾಡುವ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ಡಿಸಿಎಂ ಶಿವಕುಮಾರ್ ಮಾಹಿತಿ ನೀಡಿದರು.

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಇತಿಹಾಸದಲ್ಲೇ ಮಹತ್ತರ ತೀರ್ಮಾನ ಕೈಗೊಂಡಿದೆ. 30-12-2020ರಲ್ಲಿ ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣದಲ್ಲಿ ಕರ್ನಾಟಕ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆಯಾಗಿದ್ದು, ಇದರ ಅಂತಿಮ ವರದಿ 29-11-2013ರಲ್ಲಿ ನೀಡಲಾಗಿತ್ತು. ಆದರೂ ಇವತ್ತಿನವರೆಗೂ ಕೇಂದ್ರ ಸರ್ಕಾರ ಈ ವಿಚಾರವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ ಎಂದು ಸಚಿವರು ದೂರಿದರು.

- Advertisement - 

2 ಬಾರಿ ಸಭೆ ಮುಂದೂಡಿಕೆ:
ಕರ್ನಾಟಕ ರಾಜ್ಯ ತನ್ನ ಪಾಲಿನ ನೀರನ್ನು ಪಡೆಯಲು ನಾನು ಹಾಗೂ ಮುಖ್ಯಮಂತ್ರಿಗಳು ಹಲವು ಬಾರಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಈ ವಿಚಾರವಾಗಿ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಅಧಿಸೂಚನೆ ಹೊರಡಿಸಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸಚಿವರು ಈ ವಿಚಾರವಾಗಿ ಎರಡು ಬಾರಿ ಸಭೆ ನಿಗದಿ ಮಾಡಿದ್ದರಾದರೂ ರಾಜಕೀಯ ಒತ್ತಡಗಳಿಂದಾಗಿ ಈ ಸಭೆ ಮುಂದೂಡಲಾಗಿತ್ತು. ಒಂದು ಬಾರಿ ಮಹಾರಾಷ್ಟ್ರ ಹಾಗೂ ಮತ್ತೊಂದು ಬಾರಿ ಆಂಧ್ರ ಪ್ರದೇಶದ ಒತ್ತಡದಿಂದ ಸಭೆ ಮುಂದೂಡಲಾಗಿದೆ. ಈ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಮತ್ತೊಂದು ದಿನಾಂಕ ನಿಗದಿ ಮಾಡಿ ಸಭೆ ಮಾಡೋಣ ಎಂದು ಕೇಂದ್ರ ಸಚಿವರು ಪತ್ರ ಬರೆದಿದ್ದಾರೆ. ಹೀಗಾಗಿ ನಾವು ಯೋಜನೆ ಜಾರಿಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಮಹಾರಾಷ್ಟ್ರ ವಿರುದ್ಧ ಹೋರಾಟ:
ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಳ ಮಾಡುವುದನ್ನು ವಿರೋಧಿಸಿ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಈ ವಿಚಾರವಾಗಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ಅದರ ಬಗ್ಗೆ ಸದ್ಯಕ್ಕೆ ಚರ್ಚೆ ಮಾಡುವುದಿಲ್ಲ. ಈಗ ಬಂದಿರುವ ತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರನ್ನು ಪಡೆಯುವುದು ನಮ್ಮ ಹಕ್ಕು. ರಾಜ್ಯದ ರೈತರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ
, ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರನ್ನು ರಕ್ಷಣೆ ಮಾಡಲಾಗುವುದು ಎಂದು ಡಿಸಿಎಂ ಭರವಸೆ ನೀಡಿದರು.

ಈ ಪ್ರಕರಣದಲ್ಲಿ ನ್ಯಾಯಾಧೀಕರಣದ ತೀರ್ಪು ಹೊರಬಂದಿದೆ. ಈ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂಗೆ ಬೇರೆ ಆಯ್ಕೆ ಇಲ್ಲ. ಈ ಹಿಂದೆ ಮಹಾರಾಷ್ಟ್ರ ಈ ಯೋಜನೆಗೆ ಒಪ್ಪಿಗೆ ನೀಡಿತ್ತು. ಸಮುದ್ರಕ್ಕೆ ಸೇರುತ್ತಿರುವ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ನಾವು ಮುಂದಾಗಿದ್ದೇವೆ.

 ತೆಲಂಗಾಣ ಹಾಗೂ ಆಂಧ್ರಪ್ರದೇಶ ಈ ವಿಚಾರದಲ್ಲಿ ಒಪ್ಪಿಗೆ ನೀಡುವ ವಿಶ್ವಾಸವಿದೆ. ಈ ಯೋಜನೆಯಿಂದ ಎಲ್ಲಾ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವುದೊಂದೇ ಬಾಕಿ ಇದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

Share This Article
error: Content is protected !!
";