ಅಹವಾಲು ಸಲ್ಲಿಸಿದ ವಿದ್ಯಾರ್ಥಿಗಳು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಸೆಂಟ್ ಜೋಸೆಫ್ ಶಾಲಾ ಸಭಾಂಗಣದಲ್ಲಿ ಮಂಗಳವಾರ ನಡೆದ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕಿನ ವಿವಿಧ ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿ, ಅಹವಾಲುಗಳನ್ನು ಸಲ್ಲಿಸಿದರು.

  ಶಾಲೆಗೆ ಶೌಚಾಲಯ, ಕುಡಿಯುವ ನೀರು, ಶಾಲಾ ಕಾಂಪೌಂಡ್ ನಿರ್ಮಾಣ, ಬಸ್ ವ್ಯವಸ್ಥೆ, ಶಾಲಾ ಕೊಠಡಿಗಳ ನಿರ್ಮಾಣ ಸೇರಿದಂತೆ ಇನ್ನಿತರೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ಹಲವಾರು ಅಹವಾಲುಗಳನ್ನು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಎದುರಿಗೆ ತಮ್ಮ ಸಮಸ್ಯೆಗಳನ್ನು ತೆರೆದಿಟ್ಟರು.

ಐನಹಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಕಾವ್ಯ ಮಾತನಾಡಿ, ಐನಹಳ್ಳಿ ಕುರುಬರಹಟ್ಟಿ ಶಾಲೆಗೆ ದೂರದ ಊರುಗಳಿಂದ ಬಹಳಷ್ಟು ವಿದ್ಯಾರ್ಥಿಗಳು ಬರುತ್ತಿದ್ದು, ಬಸ್‍ನ ವ್ಯವಸ್ಥೆ ಕಲ್ಪಿಸಬೇಕು. ಇದರ ಜೊತೆಗೆ ಶಾಲೆಯಲ್ಲಿ ಕೊಠಡಿ ವ್ಯವಸ್ಥೆ ಕಡಿಮೆ ಇದ್ದು, ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮವಹಿಸಬೇಕು. ಈ ಕುರಿತು ಮಕ್ಕಳ ಗ್ರಾಮ ಸಭೆಯಲ್ಲಿಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಐನಹಳ್ಳಿ ಕುರುಬರಹಟ್ಟಿ ಶಾಲೆಗೆ ಸುತ್ತ-ಮುತ್ತಲಿನ ನಾಲ್ಕೈದು ಊರುಗಳಿಂದ ಆಗಮಿಸುತ್ತಿದ್ದು, ಜಿಲ್ಲಾ ಕೇಂದ್ರದಿಂದ ಸುಮಾರು 14 ಕಿ.ಮೀ ದೂರದಲ್ಲಿದ್ದು, ಸಾರಿಗೆ ಸೌಲಭ್ಯದ ಕೊರತೆ ಇದೆ. ಆದರೂ ಸಹ ಮಕ್ಕಳು ಪೋಷಕರ ಸಹಾಯ ಹಾಗೂ ಸ್ವಯಂಪ್ರೇರಿತವಾಗಿ ಬರುತ್ತಿದ್ದಾರೆ. ಶಿಕ್ಷಕರಿಗೆ ಯಾವುದೇ ರೀತಿಯ ತೊಂದರೆ ಇಲ್ಲ.

ವಿಶೇಷವಾಗಿ ಮಕ್ಕಳಿಗೆ ಲ್ಯಾಬ್, ಕಂಪ್ಯೂಟರ್ ತರಗತಿ, ಗ್ರಂಥಾಲಯ ವ್ಯವಸ್ಥೆ ಹಾಗೂ ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಅಗತ್ಯವಿದ್ದು, ಈಗಾಗಲೇ ಕೆಎಂಇಆರ್‍ಸಿ ಅನುದಾನ ಅಡಿಯಲ್ಲಿ ಯೋಜನೆ ರೂಪಿಸಲಾಗಿದೆ. ಇದರ ಡಿಎಂಎಫ್ ಅನುದಾನದಲ್ಲಿ ಕೊಠಡಿ ನಿರ್ಮಾಣಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದ್ದು, ಅನುದಾನ ಬಂದ ನಂತರ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಐನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಗ್ರಾಮ ಸಭೆಯಲ್ಲಿ ನಡೆದ ಸಭೆಯ ನಡಾವಳಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ಪಡೆದು ಕೆಎಸ್‍ಆರ್‍ಟಿಸಿ ಅವರಿಗೆ ಶಿಫಾರಸ್ಸು ಪತ್ರ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚನೆ ನೀಡಿದರು.

ಬಸವನಶಿವನಕೆರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮಾತನಾಡಿ, ದೂರದ ಊರುಗಳಿಂದ ಆಗಮಿಸುವ ಮಕ್ಕಳಿಗೆ ಸೈಕಲ್ ವ್ಯವಸ್ಥೆ ಮಾಡಿಕೊಡಬೇಕು. ಇದು ಸರ್ಕಾರದ ಮುಂದೆ ಇರುವ ಪ್ರಶ್ನೆ. ಈ ಕುರಿತು ಆಯೋಗವು ಚರ್ಚಿಸಿದ್ದು, ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.

 ಚಿಕ್ಕಗೊಂಡನಹಳ್ಳಿ ಸರ್ಕಾರಿ ಶಾಲೆಯ ಮಿಥುನ್ ಮಾತನಾಡಿ, ನಮ್ಮ ಶಾಲೆಗೆ ಶೌಚಾಲಯ ಹಾಗೂ ಕಾಂಪೌಂಡ್ ವ್ಯವಸ್ಥೆ ಇಲ್ಲ. ಗ್ರಾಮದ ಜನರು ಮದ್ಯಪಾನ ಮಾಡುವುದು ಹಾಗೂ ಗಿಡಗಳನ್ನು ಕೀಳುವುದು ಸೇರಿದಂತೆ ಶಾಲೆಯ ಉತ್ತಮ ಪರಿಸರವನ್ನು ಹಾಳು ಮಾಡುತ್ತಿದ್ದಾರೆ.

ಇದರ ಜೊತೆಗೆ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಹಾಗೂ ಕುಡಿಯುವ ನೀರು ಕಲ್ಪಿಸಬೇಕು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ನರೇಗಾ ಯೋಜನೆಯಡಿ ಶಾಲೆಗಳಿಗೆ ಶಾಲಾ ಕಾಂಪೌಂಡ್, ಅಡುಗೆ ಕೋಣೆ, ಶೌಚಾಲಯ ನಿರ್ಮಾಣಕ್ಕೆ ಅವಕಾಶವಿದೆ. ಈ ಕೂಡಲೇ ಪರಿಶೀಲನೆ ನಡೆಸಿ ಅಗತ್ಯ ಕ್ರಮವಹಿಸಲಾಗುವುದು.

ಚಿತ್ರದುರ್ಗ ತಾಲ್ಲೂಕಿನಲ್ಲಿ ಎಷ್ಟು ಸರ್ಕಾರಿ ಶಾಲೆಗಳಿಗೆ ಶೌಚಾಲಯ, ಕಾಂಪೌಂಡ್ ಹಾಗೂ ಅಡುಗೆ ಕೋಣೆ  ಅಗತ್ಯವಾಗಿ ಬೇಕಾಗಿದೆ ಎಂಬುವುದರ ಕುರಿತು ಪ್ರಸ್ತಾವನೆ ಸಲ್ಲಿಸಿದರೆ ಪ್ರಸಕ್ತ ವರ್ಷದಿಂದಲೇ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ  ರೂಪಿಸಲು ಕ್ರಮ:
ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ  ರೂಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ನಗರದ ಸೆಂಟ್ ಜೋಸೆಫ್ ಶಾಲಾ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಸಂವಾದ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಮಕ್ಕಳಿಗೆ ಬಹಳ ಮುಖ್ಯವಾಗಿ ಬಸ್ ವ್ಯವಸ್ಥೆ ಅಗತ್ಯವಾಗಿದ್ದು, ಮಕ್ಕಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಹಾಗೂ ಅಹವಾಲು ಸಲ್ಲಿಸಲಾಗುತ್ತಿದ್ದು, ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಕ್ತ ಶಿಫಾರಸ್ಸು ಮಾಡಲು ಆಯೋಗ ವಿಶೇಷ ಅಧ್ಯಯನ ನಡೆಸಲು ಸಂಸ್ಥೆಯೊಂದಕ್ಕೆ ಜವಾಬ್ದಾರಿ ನೀಡಲಾಗಿದೆ ಎಂದರು.

ಸಾರಿಗೆ ವ್ಯವಸ್ಥೆ ಸಂಬಂಧ ಮಕ್ಕಳು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದು, ಇದು ಆಯೋಗದ ಗಮನಕ್ಕೆ ಬಂದಿದ್ದು, ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ಯಾವೆಲ್ಲ ಕ್ರಮಕೈಗೊಳ್ಳಬೇಕು ಎಂಬುವುದರ ಕುರಿತು ಇನ್ನೂ ಆರು ತಿಂಗಳಲ್ಲಿ ವರದಿ ಬರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಡಿಸೆಂಬರ್ ಮಾಹೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಕ್ಕಳಿಂದ ಅಹವಾಲು ಸ್ವೀಕರಿಸುವ ಹಾಗೂ ಸಂವಾದ ಕಾರ್ಯಕ್ರಮ ನಡೆಸಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಕ್ಕಳ ಹಕ್ಕುಗಳ ತಲುಪಿಸಲು ಹಲವಾರು ಇಲಾಖೆಗಳ ಜವಾಬ್ದಾರಿ ಇದೆ ಎಂದು ಹೇಳಿದರು.

ಪೊಲೀಸ್ ವ್ಯವಸ್ಥೆಯ ಪರಿಚಯ ಮಾಡಿಕೊಡಿ: ಬಾಲನ್ಯಾಯ ಕಾಯ್ದೆ ಅನುಸಾರ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮೂರು ಜನ ಅಧಿಕಾರಿಗಳನ್ನು ಮಕ್ಕಳ ವಿಶೇಷ ಪೊಲೀಸ್ ಘಟಕ ಇದೆ. ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಪ್ರತಿ ಗುರುವಾರ ಪೊಲೀಸ್ ಠಾಣೆಗೆ  ಹೋಗಿ ಪೊಲೀಸ್ ವ್ಯವಸ್ಥೆ ಬಗ್ಗೆ ಮಾಹಿತಿ  ಪಡೆಯಬಹುದಾಗಿದೆ. ಶಿಕ್ಷಕರು ಸ್ಥಳೀಯ ಪೊಲೀಸರ ಸಹಕಾರ ಪಡೆದು ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಬರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಶಿಕ್ಷಕರಿಗೆ ತಿಳಿಸಿದರು.

 ಚಿತ್ರದುರ್ಗ ಉಪವಿಭಾಗದ ಉಪಾಧೀಕ್ಷಕ ದಿನಕರ್ ಮಾತನಾಡಿ, ಪ್ರತಿ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಮಟ್ಟದ ಅಧಿಕಾರಿಯನ್ನು ಮಕ್ಕಳ ಕಲ್ಯಾಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಇಬ್ಬರು ಸಹಾಯಕರು ಇರುತ್ತಾರೆ. ಮಕ್ಕಳ  ಸಂಬಂಧಿತ ಯಾವುದೇ ಪ್ರಕರಣ ಬಂದರೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ವಹಿಸುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಡಿವೈಪಿಸಿ ವೆಂಕಟೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಹಾಗೂ ಚಿತ್ರದುರ್ಗ ತಾಲ್ಲೂಕಿನ ವಿವಿಧ ಪ್ರೌಢಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಇದ್ದರು.

 

 

- Advertisement -  - Advertisement - 
Share This Article
error: Content is protected !!
";