ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಾಲ್ಲೂಕಿಗೆ ತರುವ ನಿಟ್ಟಿನಲ್ಲಿ ಅರ್ಕಾವತಿ ನದಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ರೈತರು ಉರುಳು ಸೇವೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕಿನ ಬಾಶೇಟ್ಟಹಳ್ಳಿಯಲ್ಲಿ ಕಾರ್ಖಾನೆಗಳಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ತ್ಯಾಜ್ಯ ನೀರನ್ನು ರಾಜಕಾಲುವೆಗಳ ಮುಖಾಂತರ ಕೆರೆಗಳಿಗೆ ಬಿಡುತ್ತಿರುವುದು ಸಾಕ್ಷಿ ಸಮೇತ ಸಂಬಂಧಪಟ್ಟ ಇಲಾಖೆಗಳಿಗೆ ದೂರು ಕೂಟ್ಟರು ಏನು ಪ್ರಯೋಜನವಾಗುತ್ತಿಲ್ಲ.ಇದಕ್ಕೆ ಪ್ರಮುಖ ಕಾರಣ ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸಿದೆ ಇರುವುದು, ಬೆಂಗಳೂರಿನಲ್ಲಿ ಇದರ ಕಛೇರಿ ಇರುವುದರಿಂದ ಸೂಕ್ತ ಸಮಯಕ್ಕೆ ಬರಲು ಸಾಧ್ಯವಾಗುತ್ತಿಲ್ಲ.
ಈ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸಮಿತಿಯು ನಿರಂತರವಾಗಿ ಜಿಲ್ಲಾಧಿಕಾರಿಗಳಿಗೆ ಬರವಣಿಗೆ ಮುಖಾಂತರ ದೂರಗಳನ್ನು ಕೊಟ್ಟಿರುತ್ತೇವೆ ಹಾಗೂ ಸಾಕಷ್ಟು ಬಾರಿ ಹೋರಾಟ ಸಮಿತಿಯ ಜೊತೆ ಸಭೆ ನಡೆಸಿ ಮೌಖಿಕವಾಗಿಯು ತಿಳಿಸಿರುತ್ತೇವೆ, ಆದರೂ ಏನು ಪ್ರಯೋಜನವಾಗಿಲ್ಲ ಹಾಗಾಗಿ ಅರ್ಕಾವತಿ ನದಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ರೀತಿಯ ಪ್ರತಿಭಟನೆಯನ್ನು ಮಾಡಲು ನಿರ್ಧರಿಸಿದ್ದೇವೆ ಎಂದು ಹೋರಾಟಗಾರರು ತಿಳಿಸಿದರು.
ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಳೀಯವಾಗಿ ಕಲ್ಪಿಸಬೇಕು ಇಲ್ಲವಾದಲ್ಲಿ ನಮ್ಮ ಹೋರಾಟ ಮತ್ತಷ್ಟು ಹೆಚ್ಚಾಗಲಿದೆ ಎಂದು ವಸಂತಕುಮಾರ ಆಕ್ರೋಶ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸತೀಶ್, ರಮೇಶ್, ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.