ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ನಿಮಾರ್ಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ಶಿಸ್ತು ಮತ್ತು ಕೌಶಲ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ರಾಜ್ಯಪಾಲರ ಪ್ರಶಸ್ತಿ ಪಡೆದ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ರವರು 2024-25ನೇ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‍ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕøತಿಯ ಅರಿವು ಮೂಡಿಸುವ ಕೆಲಸ ಹೆಚ್ಚಾಗಬೇಕು. ಪರಿಸರ ಜಾಗೃತಿ, ಸ್ವಚ್ಛತೆ ಹಾಗೂ ಶಿಸ್ತು ಮತ್ತು ಸಂಯಮ ಮೂಡಿಸುವಲ್ಲಿ ಸಹಕಾರಿಯಾಗಿದೆ ಎಂದರು.
ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಬೇಕು ಮತ್ತು ಮಕ್ಕಳು ಅದನ್ನು ರೂಡಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸ ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದಾಗಬೇಕು. ಮನುಷ್ಯನಿಗೆ ಸಂತೋಷ ಮತ್ತು ಆನಂದ ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ ಸಿಗಲು ಸಾಧ್ಯ ಎಂದು ತಿಳಿಸಿದ ಅವರು, ಹಾಗೇ ನಮ್ಮ ಕುಟುಂಬದವರು ಸಹ ವಿದ್ಯಾಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿಕೊಂಡರು.
ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿಕೊಂಡಿರುವ ಮಕ್ಕಳಲ್ಲಿ ಲೀಡರ್ ಶೀಪ್ ಗುಣ ಇರುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ನಿಮ್ಮ ಪಾತ್ರ ಬಹು ದೊಡ್ಡದಿದೆ ಎಂದರು. ನಮ್ಮ ಜಿಲ್ಲೆಯಲ್ಲಿ 44,000 ಸ್ಕೌಟ್ಸ್ ಮತ್ತು ಗೈಡ್ಸ್‍ಗಳಿದ್ದು, 244 ಮಂದಿ ರಾಜ್ಯಪಾಲರ ಪ್ರಶಸ್ತಿ ಪಡೆದವರಾಗಿದ್ದಾರೆ. ಪ್ರಶಸ್ತಿ ಪಡೆದ ಮಕ್ಕಳಿಗೆಲ್ಲರಿಗೂ ಮತ್ತು ಇದಕ್ಕೆ ಸಹಕರಿಸಿದ ಅಧಿಕಾರಿಗಳಿಗೂ ಮತ್ತು ಸಿಬ್ಬಂದಿಗಳಿಗೂ ಶುಭ ಹಾರೈಸಿ, ಇನ್ನೂ ಹೆಚ್ಚು ಪ್ರಶಸ್ತಿಗಳನ್ನು ಪಡೆದು ಜಿಲ್ಲೆ ಮತ್ತು ರಾಜ್ಯಕ್ಕೆ ಹೆಸರು ತರಬೇಕು ಎಂದು ಆಶಯವ್ಯಕ್ತಪಡಿಸಿದರು.
ಚಿತ್ರದುರ್ಗ ನಗರದ ಎಸ್.ಆರ್.ಎಸ್ ಹೆರಿಟೇಜ್ ಶಾಲೆ, ಡಾನ್ ಬಾಸ್ಕೋ ಶಾಲೆ, ವಿದ್ಯಾ ವಿಕಾಸ ಶಾಲೆ, ವಾಸವಿ ಶಾಲೆ, ಭರಮಸಾಗರ ಡಿ.ವಿ.ಎಸ್ ಶಾಲೆ, ಹೊಳಲ್ಕೆರೆ ವಾಗ್ದೇವಿ ಶಾಲೆ ಹಾಗೂ ಶಾರದಾ ನ್ಯಾಷನಲ್ ಶಾಲೆಗಳು ಪ್ರಶಸ್ತಿ ಪಡೆದಿವೆ.
ಈ ಸಂದರ್ಭದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತೆ ಎಲ್.ಸವಿತಾ ಶಿವಕುಮಾರ್, ಜಿಲ್ಲಾ ಸ್ಥಾನಿಕ ಆಯುಕ್ತ ಅನಂತ್ ರೆಡ್ಡಿ, ಜಂಟಿ ಕಾರ್ಯದರ್ಶಿ ಡಾ.ರೆಹಮಲ್ ಉಲ್ಲಾ, ಜಿಲ್ಲಾ ರೋವರ್ಸ್ ಅಧಿಕಾರಿ ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಶೀಲಾ ಮಂಜುನಾಥ್, ಡಾನ್‍ಬಾಸ್ಕೋ ಶಾಲೆಯ ಬಷೀರ್ ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್‍ನ ಮಕ್ಕಳು ಇದ್ದರು.