ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ ಇನ್ನಿಲ್ಲ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ(79) ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಹೆಚ್.ವೈ. ಮೇಟಿ ಮೃತಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಮೇಟಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇದೀಗ ಮೇಟಿ ಕೊನೆಯುಸಿರೆಳೆದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಹೆಚ್.ವೈ. ಮೇಟಿ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಹುಲ್ಲಪ್ಪ ಯಮನಪ್ಪ ಮೇಟಿ ಬಾಗಲಕೋಟೆ ಕಾಂಗ್ರೆಸ್ ಹಾಲಿ ಶಾಸಕರಾಗಿದ್ದಾರೆ.
ಮೇಟಿ ನಡೆದು ಬಂದ ಹಾದಿ: ಮೇಟಿಯವರು ಜನತಾ ಪರಿವಾರದಿಂದ ಬೆಳೆದು ಬಂದ ರಾಜಕಾರಣಿ. ಗುಳೇದಗುಡ್ಡದಿಂದ ಜೆಡಿಎಸ್ ಪಕ್ಷದಿಂದ ಮೊದಲ ಬಾರಿಗೆ ಸ್ಪರ್ಧಿಸಿ ಹೆಚ್. ವೈ. ಮೇಟಿ ಗೆಲುವು ಸಾಧಿಸಿದ್ದರು. ಬಳಿಕ 1994 ರಲ್ಲಿ ಮತ್ತೊಮ್ಮೆ ಗುಳೇದಗುಡ್ಡದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಪಡೆದಿದ್ದರು.
1994ರಲ್ಲಿ ಹೆಚ್.ಡಿ. ದೇವೇಗೌಡ ಸಂಪುಟದಲ್ಲಿ ಅರಣ್ಯ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಮೇಟಿ ಅವರು ಜೆಡಿಎಸ್ ನಿಂದ ಬಾಗಲಕೋಟೆ ಸಂಸದರಾಗಿ ಚುನಾಯಿತರಾಗಿದ್ದರು. 1998 ರಲ್ಲಿ ಸಂಸದ ಸ್ಥಾನಕ್ಕೆ ಸೋಲು ಕಂಡಿದ್ದರು. 2004ರಲ್ಲಿ ಮತ್ತೆ ಗುಳೇದಗುಡ್ಡದಿಂದ ಗೆಲುವು ಸಾಧಿಸಿದ್ದರು.
ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾದ ಮೇಟಿ ಸಿದ್ದರಾಮಯ್ಯ ಜನತಾ ದಳ ತೊರೆದಾಗ ಅವರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಕಾಲಿಟ್ಟರು. ಸದ್ಯ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 2013ರ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಖಾತೆ ಸಚಿವರಾಗಿದ್ದರು.
ಸಂತಾಪ-
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರಾದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣೀರು ಹಾಕಿ ಸಂತಾಪ ಸೂಚಿಸಿದ್ದಾರೆ.
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಸಂತಾಪ ಸೂಚಿಸಿ ಪ್ರಾರ್ಥಿಸಿದ್ದಾರೆ.

