ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು
, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ರಾಜಕೀಯ ಮುತ್ಸದ್ದಿ ಡಾ. ಶಾಮನೂರು ಶಿವಶಂಕರಪ್ಪ(94) ಅವರು ಡಿಸೆಂಬರ್ 14ರ ಭಾನುವಾರ ಸಂಜೆ 6.50ಕ್ಕೆ ನಿಧನರಾಗಿದ್ದಾರೆ.

ಹಾಲಿ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಮೂರು ಮಂದಿ ಗಂಡು ಮಕ್ಕಳು, ನಾಲ್ವರು ಪುತ್ರಿಯರು, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೊಸೆ ಸೇರಿದಂತೆ ಅಪಾರ ಬಂಧು ಬಳಗದವರನ್ನು ಶಾಮನೂರು ಶಿವಶಂಕರಪ್ಪನವರು ಅಗಲಿದ್ದಾರೆ.

- Advertisement - 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗದೇ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ವಿಧಾನಸಭೆಯಲ್ಲಿ ಸಂತಾಪ ಸೂಚನೆ ಮಂಡಿಸಲಾಗುವುದು. ಆ ದಿನ ವಿಧಾನಸಭಾ ಕಲಾಪ ನಡೆಯದು ಎಂದು ತಿಳಿದುಬಂದಿದೆ.

ಜೀವನ ಪಯಣ-
ಶಾಮನೂರು ಶಿವಶಂಕರಪ್ಪನವರು 1931 ಜೂನ್ 16ರಂದು ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಅವರು ಶಿಕ್ಷಣ
, ಕೈಗಾರಿಕೋದ್ಯಮಿ, ರಾಜಕಾರಣಿ ಹಾಗೂ ಸಮಾಜಸೇವಕರಾಗಿ ಗುರುತಿಸಿಕೊಂಡಿದ್ದರು.
ಕಳೆದ ಮೂರು ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದ ಅವರು ಮಾಜಿ ತೋಟಗಾರಿಕೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

- Advertisement - 

ತೋಟಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸುಮಾರು 1,000 ಕೋಟಿ ರೂ. ಅನುದಾನವನ್ನು ರಾಜ್ಯದ ತೋಟಗಾರಿಕೆ ಚಟುವಟಿಕೆಗಳ ಉತ್ತೇಜನಕ್ಕೆ ವ್ಯವಸ್ಥಿತವಾಗಿ ಬಳಕೆ ಮಾಡುವ ನಿರ್ಧಾರ ಕೈಗೊಂಡು ಅದನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದರು.

ದಾವಣಗೆರೆಯಲ್ಲಿ ಬಾಪೂಜಿ ಎಂಜಿನಿಯರಿಂಗ್ ಅಸೋಸಿಯೇಷನ್‌ಅಧ್ಯಕ್ಷರಾಗಿ ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದರು.
ಅಂಗವಿಕಲರ ಆಶಾ ಕಿರಣ ಟ್ರಸ್ಟ್
, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ಸ್ಪೋರ್ಟ್ಸ್ ಕ್ಲಬ್‌ಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕೈಗಾರಿಕೋದ್ಯಮಿಯಾಗಿ ಶಾಮನೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸ್ಥಾಪಿಸಿ ಸಕ್ಕರೆ ಮತ್ತು ಡಿಸ್ಟಿಲರಿ ವ್ಯಾಪಾರದಲ್ಲಿ ಯಶಸ್ವಿಯಾಗಿದ್ದರು.

ಮಾಜಿ ಪ್ರಧಾನಿ ದೇವೇಗೌಡರ ಕಂಬನಿ-
ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು
, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ.

ಅವರ ಸರಳತೆ ಮತ್ತು ಸಾರ್ವಜನಿಕ ಜೀವನದಲ್ಲಿ ಅವರ ಸುಧೀರ್ಘ ಜನಸೇವೆ ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ಹಾಗೂ  ಅಭಿಮಾನಿಗಳಿಗೆ ಕರುಣಿಸಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಕಂಬನಿ-
ನಾಡಿನ ಹಿರಿಯ ರಾಜಕಾರಣಿಗಳು
, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಂಬನಿ ಮಿಡಿದ್ದಾರೆ.

ಶಾಮನೂರು ಶಿವಶಂಕರಪ್ಪ ಇವರನ್ನು ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ.

ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ಡಿಕೆ ಶಿವಕುಮಾರ್ ಸಂತಾಪ-
ಮಾಜಿ ಸಚಿವರು
, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

 ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಡಿ.ಕೆ ಶಿವಕುಮಾರ್ ಅವರು ಪ್ರಾರ್ಥಿಸಿದ್ದಾರೆ. ಈಗ ಅವರ ನಿಧನಕ್ಕೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಸಂತಾಪ-
ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪ ರವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ ಕಾರ್ಯನಿರ್ವಹಿಸಿದ್ದರು.

ವಿಶೇಷವಾಗಿ ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಮುನ್ನಡೆಸಿದ್ದರು. ಅವರ  ನಿಧನದಿಂದ ರಾಜ್ಯಕ್ಕೆ ಮತ್ತು ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ, ವೀರಶೈವ ಸಮಾಜಕ್ಕೆ ಮತ್ತು ನನಗೆ ವಯಕ್ತಿಕವಾಗಿ ತುಂಬಲಾರದ ಹಾನಿಯಾಗಿದೆ.

ಅವರ ಅಗಲಿಕೆಯ ದುಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಹಾಗೂ  ಮೃತರ ಆತ್ಮಕ್ಕೆ ಚಿರ ಶಾಂತಿ ದೊರೆಯಲೆಂದು ಬೊಮ್ಮಾಯಿ ಅವರು ಪ್ರಾರ್ಥಿಸಿದ್ದಾರೆ.

Share This Article
error: Content is protected !!
";