ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಸಿದ್ದರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿರುವುದಕ್ಕೆ ಜನಾಕ್ರೋಶ ವ್ಯಕ್ತವಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದಿದ್ದಾರೆ. 20 ತಿಂಗಳ ಬಳಿಕ ಸರ್ಕಾರ ಟೇಕಾಫ್ ಆಗುತ್ತಿದೆ ಎಂದಿರುವ ಸಚಿವ ಡಿ. ಸುಧಾಕರ್ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿವೆ ಎಂದು ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇದೊಂದು ವಂಚಕ ಸರ್ಕಾರ, ಕೆಟ್ಟ ಆಡಳಿತ ನೀಡುತ್ತಿದೆ. ಅದನ್ನು ಮರೆಮಾಚಲು ನಡೆಸಿದ ಕಸರತ್ತು ವಿಫಲವಾಗಿವೆ. 20 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಯಿಂದ ಬೊಕ್ಕಸ ಬರಿದಾಗಿ, ಸರ್ಕಾರ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸಿಎಂ ಮತ್ತು ಸಚಿವರು ಈ ಕಾರಣದಿಂದಲೇ ಎಲ್ಲೂ ಪ್ರವಾಸ ನಡೆಸುತ್ತಿಲ್ಲ. ಭೇಟಿ ನೀಡಿದ ಕಡೆ ಜನರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಕುಳಿತು ಕಾಲಹರಣ ಮಾಡುತ್ತಿದ್ದಾರೆ. ಒಂದು ಕಡೆ ದರ ಏರಿಕೆ ಬರೆ, ಮತ್ತೊಂದು ಕಡೆ ಯಾವುದೇ ಕಚೇರಿಗೆ ಹೋದರೂ ಲಂಚದ ಹಾವಳಿಯಿಂದ ಜನ ಹೈರಾಣ ಆಗಿದ್ದಾರೆ ಎಂದು ಅಶೋಕ್ ಅವರು ಹರಿಹಾಯ್ದಿದ್ದಾರೆ.
ಕಾಂಗ್ರೆಸ್‌ಮುಖಂಡರು, ಕಾರ್ಯಕರ್ತರೇ ಹಾದಿ ಬೀದಿಗಳಲ್ಲಿ ಈ ವಾಸ್ತವ ಸಂಗತಿಯನ್ನು ಟೀಕಿಸುತ್ತಿದ್ದಾರೆ. ಹೆಚ್ಚು ದಿನ ಸುಳ್ಳು ಹೇಳಿ ಕಾಲಹರಣ ಮಾಡಲು ಆಗುವುದಿಲ್ಲ. ಹೀಗಾಗಿ ಆ ಸತ್ಯವನ್ನು ರಾಯರೆಡ್ಡಿ ಮತ್ತು ಸಚಿವ ಡಿ. ಸುಧಾಕರ್ ಬಹಿರಂಗವಾಗಿ ಹೇಳಿದ್ದಾರೆ. ಇದಕ್ಕಿಂತ ಈ ಸರ್ಕಾರಕ್ಕೆ ದೊಡ್ಡ ಸರ್ಟಿಫಿಕೇಟ್ ಬೇಕೆ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ವಿಧಾನಸೌಧದ ಮುಂದೆ ದಿನವಿಡೀ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದ ಸಿದ್ದರಾಮಯ್ಯನವರು, ಇನ್ನು ಮುಂದೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ಮಾಡಬೇಕು ಎಂದು ಸೂಚನೆ ನೀಡಿದ್ದರು. ಸಿಎಂ ಮಾತಿಗೆ ಯಾವ ಸಚಿವರು ಕೇರ್ ಮಾಡುತ್ತಿಲ್ಲ. ಎಲ್ಲಿಯೂ ಜನತಾ ದರ್ಶನ ನಡೆಯುತ್ತಿಲ್ಲ. ಇದು ಸರ್ಕಾರದ ಕಾರ್ಯವೈಖರಿಗೆ ಚಿಕ್ಕ ಸ್ಯಾಂಪಲ್ ಎಂದು ಅಶೋಕ್ ಆರೋಪಿಸಿದರು.
ಸಿದ್ದರಾಮಯ್ಯನವರು ಇನ್ನೆಷ್ಟು ದಿನ ಇರುತ್ತಾರೆ? ಬದಲಾಗುತ್ತಾರೆ ಎಂಬ ಉಡಾಫೆ ಸಚಿವರಲ್ಲಿದೆ. ಇದರಿಂದ ಜನರ ಅಹವಾಲು ಕೇಳುವವರು ದಿಕ್ಕಿಲ್ಲದಂತಾಗಿದೆ. ಅಧಿಕಾರಿಗಳು ಕೂಡ ಮಾತು ಕೇಳುತ್ತಿಲ್ಲ, ಕಚೇರಿಗೂ ಬರುತ್ತಿಲ್ಲ. ಹೀಗಾಗಿ ಆಡಳಿತ ಹಳಿ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಯಕತ್ವ ಬದಲಾವಣೆ ರಾದ್ಧಾಂತ, ಭ್ರಷ್ಟಾಚಾರ, ಲೂಟಿಯಲ್ಲೇ ಇಡೀ ಸರ್ಕಾರ ಮುಳುಗಿ ಹೋಗಿದೆ. ದರ ಏರಿಕೆ ಬರೆ ಮೂಲಕ ಜನಸಾಮಾನ್ಯರನ್ನು ರಣಹದ್ದುಗಳಂತೆ ಕುಕ್ಕಿ ತಿನ್ನುತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.
ವಿಧಾನಸೌಧದ ಆಡಳಿತ ಕೇರಳದ ವಯನಾಡಿಗೆ ಶಿಫ್ಟ್ ಆಗಿದೆ. ಅಲ್ಲಿಂದ ಬರುವ ಸೂಚನೆಯನ್ನು ಇಲ್ಲಿ ಪಾಲಿಸಲಾಗುತ್ತಿದೆ. ಹುಲಿ ಯೋಜನೆ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಪ್ರದೇಶದಲ್ಲಿ ಮಲಯಾಳಂ ಚಲನಚಿತ್ರ ಚಿತ್ರೀಕರಣ ಮಾಡಲು ಅವಕಾಶ ನೀಡಿರುವುದೇ ಇದಕ್ಕೆ ಸಾಕ್ಷಿ. ನಿರ್ಬಂಧಿತ ಪ್ರದೇಶದಲ್ಲಿ ಶೂಟಿಂಗ್ ಮಾಡಲು ಸ್ಥಳೀಯ ಅಧಿಕಾರಿಗಳು ಅವಕಾಶ ನೀಡಿಲ್ಲ. ಸರ್ಕಾರದ ಮಟ್ಟದಲ್ಲೇ ಶೂಟಿಂಗ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಸ್ಥಳೀಯ ಎಸಿಎಫ್ ಹೇಳಿಕೆ ನೀಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಅಂದರೆ ಯಾರು? ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕಿದೆ. ಈ ಹಿಂದೆ ವಯನಾಡು ಆನೆ ದಾಳಿಗೆ ರಾಜ್ಯ ಸರ್ಕಾರ ಪರಿಹಾರ ನೀಡುವಂತೆ ರಾಹುಲ್ ಗಾಂಧಿ ಪತ್ರ ಬರೆದಿದ್ದರು. ಈಗಲೂ ಅದೇ ರೀತಿ ಸೂಚನೆ ಏನಾದರೂ ವಯನಾಡ್ ನಿಂದ ಬಂದಿದೆಯೇ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.