ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್ಹೈಕಮಿಷನರ್ಲಿಂಡಿ ಕ್ಯಾಮೆರಾನ್ಅವರೊಂದಿಗೆ ಸಮಾಲೋಚನೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಉದ್ಯಮಗಳಿಗೆ ಬೆಂಗಳೂರಿನಲ್ಲಿ ವಿಫುಲ ಅವಕಾಶಗಳಿದ್ದು, ಮುಂದಿನ ಫೆಬ್ರವರಿ ತಿಂಗಳಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಇಲ್ಲಿ ನಡೆಯಲಿದೆ.
ಸರ್ಕಾರದ ಮಹತ್ವಾಕಾಂಕ್ಷೆಯ ಕ್ವಿನ್ಸಿಟಿ ಯೋಜನೆಯಡಿ ಸಹ ಅವಕಾಶಗಳನ್ನು ಬಳಸಿಕೊಳ್ಳಬಹುದಾಗಿದೆ. ನಮ್ಮ ರಾಜ್ಯದ ಕೈಗಾರಿಕಾ ನೀತಿಯು ಅತ್ಯಂತ ಪ್ರಗತಿಶೀಲವಾಗಿದೆ.
ರಾಜ್ಯದ ಬಹುತೇಕ ನಗರಗಳಿಗೆ ಉತ್ತಮ ವಿಮಾನಯಾನ ಸಂಪರ್ಕವಿದ್ದು, ಇಂತಹ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ತೊಡಗಿಸಲು ಸರ್ಕಾರ ಎಲ್ಲಾ ನೆರವು ಒದಗಿಸಲಿದೆ ಎಂದು ಅವರು ತಿಳಿಸಿದರು.