ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದೆ. ಜಾರಿ ನಿರ್ದೇಶನಾಲಯವು ಮುಡಾ ಪ್ರಕರಣದಲ್ಲಿ ವಿವಿಧ ಹಂತದ ಅಧಿಕಾರಿಗಳಿಂದ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಆಸ್ತಿ ಜಪ್ತಿ ಮಾಡಲಾಗಿದೆ.
ಮುಡಾ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್‌ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಐಪಿಸಿ, 1860 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು. ಇದೀಗ ಭ್ರಷ್ಟಾಚಾರ ನಡೆದಿರುವ ಬಗ್ಗೆ ಇಡಿ ಉಲ್ಲೇಖಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಆರೋಪ ಕೇಳಿಬಂದಿತ್ತು. ನಗದು, ಬ್ಯಾಂಕ್ ವರ್ಗಾವಣೆ, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆ ವೇಳೆ ಸಂಗ್ರಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.
400 ಕೋಟಿ ಆಸ್ತಿ ಮುಟ್ಟುಗೋಲು–
ಜಾರಿ ನಿರ್ದೇಶನಾಲಯವು ಈ ಹಿಂದೆ 300 ಕೋಟಿ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಮತ್ತೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಎರಡು ಹಂತದಲ್ಲಿ ಒಟ್ಟು 400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇನ್ನೂ 800 ಸೈಟ್ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಸಿಎಂ ಬಚಾವಾಗಲು ಸಾಧ್ಯವೇ ಇಲ್ಲ:
ದೂರುದಾರ ಸ್ನೇಹಮಯಿ ಕೃಷ್ಣ ಸ್ನೇಹಮಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಮುಡಾ ಕೇಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ರಾಜ್ಯದ ಜನರಿಗೆ ಮುಂದಿನ 3 ಅಥವಾ 4 ತಿಂಗಳಲ್ಲಿ ಗೊತ್ತಾಗುತ್ತದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ಶಿಕ್ಷೆ ಆಗಿಯೇ ತೀರುತ್ತೆ ಎಂದು ದೂರುದಾರ ಕೃಷ್ಣ ಭವಿಷ್ಯ ನುಡಿದಿದ್ದಾರೆ.