ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನನ್ನ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿದ ಸುದ್ದಿ ಗಮನಿಸಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು.
ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದೇವೆ. ಆದರೆ ಕಾಲಘಟ್ಟ ಬೇರೆ ಬೇರೆಯಾಗಿದೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

