800 ಕೆಪಿಎಸ್ ಶಾಲೆಗಳಿಗೆ ತಲಾ 4 ಕೋಟಿ ಅನುದಾನ- ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

- Advertisement - 

ಶಿಕ್ಷಣ ಕ್ಷೇತ್ರದ ಬಲವರ್ಧನೆಗಾಗಿ ಈ ವರ್ಷ 65,000 ಕೋಟಿ ರೂ.ಗಳಿಗೂ ಹೆಚ್ಚಿನ ಸಂಪನ್ಮೂಲಗಳನ್ನು ನಮ್ಮ ಸರ್ಕಾರ ವಿನಿಯೋಗಿಸುತ್ತಿದೆ. ನಮ್ಮ ವಸತಿ ಶಾಲೆಗಳು, ವಸತಿ ನಿಲಯಗಳಲ್ಲಿ 8.36 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆಗಳು, ವಸತಿ ನಿಲಯಗಳನ್ನು ಸ್ಥಾಪಿಸುತ್ತಿದ್ದೇವೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಪ್ರತ್ಯೇಕ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಕ್ಯಾನ್ಸರ್ ನಿಂದ ಬಾಧಿತರಾದ ಮಕ್ಕಳಿಗೆ ವೈದ್ಯಕೀಯ ಬೆಂಬಲದೊಂದಿಗೆ ಶಿಕ್ಷಣವನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

- Advertisement - 

ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿ ಮತ್ತು ತರಬೇತಿಗಳನ್ನು ನಡೆಸಲಾಗುತ್ತಿದೆ. 2024ರಲ್ಲಿ 14,499 ಪದವಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಮತ್ತು ಇತರೆ ಪ್ರದೇಶಗಳಲ್ಲಿ 5,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. 800 ಹೊಸ ಪಿಯು ಉಪನ್ಯಾಸಕರ ನೇಮಕಾತಿ ಮಾಡಲಾಗಿದೆ. ಹೊಸದಾಗಿ 18000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಅನುದಾನಿತ ಶಾಲೆಗಳಿಗೆ 5,000 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಲು ಅನುಮತಿ ನೀಡಲಾಗಿದೆ ಎಂದರು.
ಇತ್ತೀಚೆಗೆ ಪ್ರೊ.ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ವರದಿಯನ್ನು ನೀಡಿದೆ. ವರದಿಯನ್ನು ಗಂಭೀರವಾಗಿ ಪರಿಶೀಲಿಸಿ ಅದರ ಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಜೊತೆಗೆ ಮಕ್ಕಳ ಬದುಕು ರೂಪುಗೊಳ್ಳಲು ಪೋಷಕರ ಪಾತ್ರವೂ ಅಷ್ಟೇ ಮಹತ್ವದ್ದಾಗಿದೆ. ಹೊಸ ತಲೆಮಾರು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಸಂಕಷ್ಟಗಳನ್ನು ಎದುರಿಸುತ್ತಿದೆ. ಮೊಬೈಲ್ ಫೋನು, ಇಂಟರ್‍ನೆಟ್, ಆರ್ಟಿಫೀಷಿಯಲ್ ಇಂಟೆಲಿಜೆನ್ಸುಗಳು ಇಬ್ಬಾಯ ಖಡ್ಗದಂತೆ ಕೆಲಸ ಮಾಡುತ್ತಿವೆ.

ಫಾರಿನ್ ಡೈರೆಕ್ಟ್ ಇನ್ವೆಸ್ಟ್ ಮೆಂಟ್ ನಲ್ಲಿ 2024-25 ರಲ್ಲಿ ಕರ್ನಾಟಕವು ಮಹಾರಾಷ್ಟ್ರವನ್ನು ಹಿಂದೆ ಹಾಕಿ, ಮೊದಲ ಸ್ಥಾನಕ್ಕೆ ಏರಿದೆಯೆಂದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಅಂಕಿ ಅಂಶಗಳು ಹೇಳುತ್ತಿವೆ. 50,107 ಕೋಟಿ ರೂ.ಗಳಿಗೂ ಹೆಚ್ಚಿನ ವಿದೇಶಿ ನೇರ ಹೂಡಿಕೆಯು ರಾಜ್ಯದಲ್ಲಿ ಆಗಿದೆ. ಇಡೀ ದೇಶದ ಹೂಡಿಕೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಪಾಲು ಶೇ.51 ರಷ್ಟಿದೆ. ಅದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸ್ವಾಗತಿಸಿದರು ಹಾಗೂ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ವಂದಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಶಾಸಕರಾದ ರಿಜ್ವಾನ್ ಅರ್ಷದ್, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಬಿ.ಆರ್.ಪಾಟೀಲ್, ಗೋವಿಂದರಾಜು ಹಾಗೂ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷ ಡಾ.ಎಂ.ಎ. ಸಲೀಂ ಮತ್ತಿತರರು ಉಪಸ್ಥಿತರಿದ್ದರು.

Share This Article
error: Content is protected !!
";