ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ.
ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ,ರಾಜ್ಯಪಾಲರು ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಬಿಜೆಪಿಯವರು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದ ಈ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.
ವಿಚಾರಣೆ ನಡೆಸುವ ಲೋಕಾಯುಕ್ತ ನಂಬಿಕೆಯಿಲ್ಲ, ತನಿಖೆಯನ್ನು ಸಿಬಿಐ ನವರು ನಡೆಸಬೇಕೆಂಬ ಬಿಜೆಪಿಯವರ ಬೇಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಎಂದರು.