ಅಡ್ವೊಕೇಟ್ ಜನರಲ್‌ಗಳಿಗೆ ಪಾಠ ಮಾಡಿದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು:

ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಸರ್ಕಾರದ ಕಾನೂನುಗಳನ್ನು ಎಲ್ಲಾ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. ಕರ್ನಾಟಕ ರಾಜ್ಯ ಅಧಿನಿಯಮಗಳ ಸಂಪೂರ್ಣ ಅನುಷ್ಠಾನ, ಉದ್ದೇಶದ ನಿರ್ವಹಣೆ ನಿಮ್ಮ ಕೈಯಲ್ಲಿದೆ ಎಂದು ಸಿಎಂ ತಿಳಿಸಿದರು.

- Advertisement - 

ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

ಅನೇಕ ಪ್ರಕರಣಗಳಲ್ಲಿ ಸರ್ಕಾರದ ವಿರುದ್ಧ ಯಾಕೆ ಸುಲಭವಾಗಿ ತಡೆಯಾಜ್ಞೆ ದೊರೆಯುತ್ತದೆ? ತಡೆಯಾಜ್ಞೆಯನ್ನು ವರ್ಷಗಟ್ಟಲೆ ತೆರವುಗೊಳಿಸದೆ ಇಡುವ ಪ್ರಕರಣಗಳು ಯಾಕೆ ಹೆಚ್ಚಾಗುತ್ತಿವೆ? ಸರ್ಕಾರದ ವಿರುದ್ಧದ ತಡೆಯಾಜ್ಞೆ ಪ್ರಕರಣಗಳನ್ನು ಆದಷ್ಟು ಬೇಗನೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.
 ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಹ ಸರ್ಕಾರಕ್ಕೆ ಮುಜುಗುರವಾಗುವಂತಹ ಬೆಳವಣಿಗೆಗಳು ಆಗಿವೆ. ನಿಮ್ಮ ತಪ್ಪುಗಳಿಂದ ಸರ್ಕಾರಕ್ಕೆ ಮುಜುಗರವುಂಟಾಗುವ ಪರಿಸ್ಥಿತಿ ಬರಬಾರದು ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು. 

- Advertisement - 

ನೀವೆಲ್ಲರೂ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇದಕ್ಕೆ ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಎಚ್ಚರಿಸಿದರು.

ಸಂಪೂರ್ಣ ಸಿದ್ಧತೆಯೊಂದಿಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬೇಕು. ಮೆರಿಟ್‌ ಇರುವ ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಲು ಅವಕಾಶ ನೀಡಬಾರದು.

ಪ್ರತಿಯೊಂದು ಪ್ರಕರಣಗಳನ್ನು ಸವಾಲಿನಿಂದ ಸ್ವೀಕರಿಸಿ, ಕಾರ್ಯ ನಿರ್ವಹಿಸಿದರೆ ಸರ್ಕಾರಕ್ಕೆ ಉತ್ತಮ ಹೆಸರು ಬರಲು ಸಾಧ್ಯವಿದೆ. ನಿಮ್ಮಿಂದ ಹೆಚ್ಚಿನ ಕ್ರಿಯಾಶೀಲ ಕಾರ್ಯನಿರ್ವಹಣೆಯನ್ನು ಸರ್ಕಾರ ಅಪೇಕ್ಷಿಸುತ್ತದೆ.  ಇಲಾಖೆಗಳಿಂದ ಅಥವಾ ಅಧಿಕಾರಿಗಳಿಂದ ಸರಿಯಾಗಿ ಸ್ಪಂದನೆ ದೊರೆಯದಿದ್ದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಎಲ್ಲಾ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳಿಗೆ ಇಲಾಖಾವಾರು ಕಾರ್ಯಕ್ಷೇತ್ರವನ್ನು ನಿಗದಿಪಡಿಸಬೇಕು. ನ್ಯಾಯಾಂಗದಲ್ಲಿನ ಎಲ್ಲಾ ಅಡ್ಡಿಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ರಾಜ್ಯ ಸರ್ಕಾರದ ಪರವಾದ ನ್ಯಾಯಾಂಗ ಹೋರಾಟಗಳನ್ನು ಇನ್ನಷ್ಟು ವೃತ್ತಿಪರಗೊಳಿಸುವ ಅಗತ್ಯವಿದೆ ಎಂದು ಸಿಎಂ ಸಲಹೆ ನೀಡಿದರು.

 ರಾಜ್ಯ ಸರ್ಕಾರದ 21,799 ಪ್ರಕರಣಗಳು ಹೈಕೋರ್ಟ್ ನಲ್ಲಿ ಬಾಕಿಯಿವೆ. ಇದರಲ್ಲಿ 5016 ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಇದನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಅವರ ಸಭೆಯನ್ನು ಕರೆದು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

 

 

Share This Article
error: Content is protected !!
";