ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಧ್ಯಮದವರಿಗೂ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ಮತ್ತು ಮನೆ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯದ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಗೃಹಮಂಡಳಿಯಲ್ಲಿ ಭೇಟಿ ಮಾಡಿ, ಸಲ್ಲಿಸಿದ ಮನವಿ ಸ್ವೀಕರಿಸಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದ್ದಾರೆ.
ಗೃಹ ಮಂಡಳಿಯಲ್ಲಿ ನಾನಾ ಕಾರಣಗಳಿಗಾಗಿ ಹಂಚಿಕೆಯಾಗದೆ ಉಳಿದಿರುವ ನಿವೇಶನಗಳೇ ಬಹಳಷ್ಟಿವೆ. ಅವುಗಳನ್ನು ಜಿಲ್ಲಾವಾರು ಪಟ್ಟಿ ಮಾಡಿ ನಿವೇಶನ ರಹಿತರಾದ ಪತ್ರಕರ್ತರಿಗೆ ಮರು ಹಂಚಿಕೆ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೂ ಚರ್ಚೆ ಮಾಡಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಗೃಹಮಂಡಳಿ ವತಿಯಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಬಡಾವಣೆಯಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸುವ ಪತ್ರಕರ್ತರು, ಛಾಯಾಚಿತ್ರಗ್ರಾಹಕರು, ಕ್ಯಾಮರಾಮೆನ್‌ಗಳು ಸೇರಿದಂತೆ ಸುದ್ದಿಮನೆಯಲ್ಲಿ ನಾನಾ ಹಂತದಲ್ಲಿ ಕೆಲಸ ಮಾಡುವವರನ್ನು ಪ್ರತ್ಯೇಕವಾಗಿ ಪರಿಗಣಿಸಿ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಲಾಯಿತು.
ಗೃಹಮಂಡಳಿ ವತಿಯಿಂದ ನಿರ್ಮಾಣ ಮಾಡುವ ಮನೆಗಳ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಆದ್ಯತೆ ನೀಡಿ ರಿಯಾಯಿತಿ ದರದಲ್ಲಿ ನೀಡುವ ವ್ಯವಸ್ಥೆ ಮಾಡಬೇಕು ಎಂದು ಕೆಯುಡಬ್ಲೂೃಜೆ ಮನವಿಯಲ್ಲಿ ವಿನಂತಿಸಲಾಗಿದೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮತ್ತಿತರರು ಈ ಸಂದರ್ಭದಲ್ಲಿದ್ದರು.