ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಸಂವಿಧಾನದಿಂದ ದೇಶದ ಜನರಿಗೆ ಸಾಮಾಜಿಕ ನ್ಯಾಯ ಹಾಗೂ ಗೌರವಯುತ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತ ಸಂವಿಧಾನದ ಪೀಠಿಕೆಯಲ್ಲಿಯೇ “ಸಾಮಾಜಿಕ ನ್ಯಾಯದ” ಕುರಿತು ಎರಡು ಬಾರಿ ವಿಷಯ ಪ್ರಸ್ತಾಪಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯ ಸಂವಿಧಾನ ಪೀಠಿಕೆಯನ್ನು ಸಂವಿಧಾನದ ಕನ್ನಡಿ ಎಂದು ಅಭಿಪ್ರಾಯಪಟ್ಟಿದೆ ಎಂದು ತಿಳಿಸಿದ ಅವರು, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು ಎಂಬ ಉದ್ದೇಶದಿಂದ ವಿಶ್ವಸಂಸ್ಥೆ ಪ್ರತಿ ವರ್ಷ ಫೆ.20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದರು.
ಹೆಚ್ಚಿನ ಸಂಖ್ಯೆಯ ಉದ್ಯೋಗ ಸೃಜನೆ, ಸಮಾಜದಲ್ಲಿ ಕೆಳಸ್ತರದ ವ್ಯಕ್ತಿಗಳು ಸಹ ಗೌರವಯುತವಾಗಿ ಬದುಕು ನಡೆಸುವ ವಾತಾವರಣ ಸೃಷ್ಠಿ ಮಾಡುವುದು ಸಹ ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಸೇರಿದೆ. ಸಾಮಾಜಿಕ ನ್ಯಾಯ ಮಾತ್ರವಲ್ಲದೇ ಇದರ ಜತೆಗೆ ಆರ್ಥಿಕ ನ್ಯಾಯವೂ ಅಗತ್ಯವಾಗಿ ಬೇಕಾಗಿದೆ. ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಉದ್ದೇಶಕ್ಕಾಗಿ ಸರ್ಕಾರಗಳು ಭೂ ಸುಧಾರಣೆ ಕಾಯ್ದೆ ಸೇರಿದಂತೆ ಅನೇಕ ಕಾನೂನುಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಮಾತನಾಡಿ, 19ನೇ ಶತಮಾನದ ಕೈಗಾರಿಕಾ ಕ್ರಾಂತಿಯ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆ ಉಗಮವಾಯಿತು ಎಂದು ತಿಳಿಸಿದ ಅವರು, ಮಹಿಳೆಯರಿಗೂ ಪುರುಷರಿಗೆ ಸರಿಸಮಾನವಾಗಿ ನ್ಯಾಯಸಮ್ಮತವಾದ ಅವಕಾಶ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ವರಿಗೂ ಸಮಪಾಲು ಸಮಬಾಳು ಎಂಬ ಪರಿಕಲ್ಪನೆಯಲ್ಲಿ ಸಂವಿಧಾನ ರಚನೆಯಾಗಿದೆ. ಹಾಗೆಯೇ ಆರ್ಥಿಕವಾಗಿ ಹಿಂದುಳಿದವರು ಮತ್ತು ಮುಂದುವರೆದವರು ಎಂಬ ಭೇದಭಾವಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳುವ ಉದ್ದೇಶದಿಂದ ಸಾಮಾಜಿಕ ನ್ಯಾಯ ಅಸ್ತಿತ್ವದಲ್ಲಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಬಡವ, ಶ್ರೀಮಂತ ಎಂಬ ತಾರತಮ್ಯ ತೋರದೇ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.