ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾಮಾಜಿಕ ಮಾಧ್ಯಮಗಳು ಮಾಹಿತಿ ನೀಡುವ ಮಟ್ಟಿಗೆ ಮಾತ್ರ ಸೀಮಿತವಾಗಿದ್ದು, ನೈಜ ಜೀವನದ ಅನುಭವವನ್ನು ನೀಡಲು ಸಾಧ್ಯವಿಲ್ಲ ಎಂದು ತೂಬಗೆರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಉದಯ ಆರಾಧ್ಯ ಹೇಳಿದರು.
ತೂಬಗೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮುಂದಿನ ತಿಂಗಳು ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಹಂತವಾಗಿರುವುದರಿಂದ, ವಿದ್ಯಾರ್ಥಿಗಳು ಈ ಅವಧಿಯಲ್ಲಿ ಸಾಮಾಜಿಕ ಮಾಧ್ಯಮ ಹಾಗೂ ಮೊಬೈಲ್ ಬಳಕೆಯಿಂದ ದೂರವಿದ್ದು ಅಧ್ಯಯನದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಇದು ಜೀವನದ ಮಹತ್ವದ ಘಟ್ಟವಾಗಿದ್ದು, ಮಾನಸಿಕ ಒತ್ತಡದಿಂದ ಹೊರಬಂದು ಆತ್ಮವಿಶ್ವಾಸದೊಂದಿಗೆ ಓದಿನತ್ತ ಗಮನ ಹರಿಸಿದರೆ ಯಶಸ್ಸು ಸಾಧ್ಯ. ಸಮಯಪಾಲನೆ, ಶ್ರದ್ಧೆ ಮತ್ತು ಸಹನೆ ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಅಗತ್ಯವಾಗಿದ್ದು, ನಿರಂತರ ಅಭ್ಯಾಸವೇ ಸಾಧನೆಗೆ ದಾರಿ ತೆರೆದಿಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಉಷಾ ವಿ ವಹಿಸಿದ್ದರು. ಇತಿಹಾಸ ಉಪನ್ಯಾಸಕಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಗಣಿತ ಉಪನ್ಯಾಸಕಿ ಪುಷ್ಪಾವತಿ ವಾರ್ಷಿಕ ವರದಿಯನ್ನು ಮಂಡಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತ್ಯನಾರಾಯಣಪ್ಪ, ವೆಂಕಟೇಶ್, ಮುಖಂಡರಾದ ಮುನಿಕೃಷ್ಣಪ್ಪ, ಕೃಷ್ಣಪ್ಪ, ಯುವ ಮುಖಂಡ ಉದಯ ಆರಾಧ್ಯ, ಹಿರಿಯ ಉಪನ್ಯಾಸಕ ಶಿವಶಂಕರ್, ಮಹೇಶ್, ರಾಧಾಕೃಷ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕ, ಸಹ ಶಿಕ್ಷಕ ದಿಕ್ಷೀತ್, ಮುನಿರಾಜು ಸೇರಿದಂತೆ ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

