ಡೀಸೆಲ್, ಟೋಲ್ ಶುಲ್ಕ ಹೆಚ್ಚಳ ಖಂಡಿಸಿ ಮಧ್ಯ ರಾತ್ರಿಯಿಂದಲೇ ಲಾರಿಗಳ ಮುಷ್ಕರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ಸೋಮವಾರ ಮಧ್ಯರಾತ್ರಿಯಿಂದಲೇ ಡೀಸೆಲ್ ದರ ಏರಿಕೆ
, ಟೋಲ್ ಶುಲ್ಕ ಹೆಚ್ಚಳ ಖಂಡಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿದೆ.

ಡೀಸೆಲ್ ದರ ಇಳಿಕೆ, ಆರ್‌ಟಿಒ ಅಧಿಕಾರಿಗಳಿಂದ ಕಿರುಕುಳ ತಪ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರು ಏ.14ರವರೆಗೆ ಗಡುವು ನೀಡಿದ್ದರು. ಆದರೆ, ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಇರುವುದರಿಂದ ಮಧ್ಯರಾತ್ರಿಯಿಂದಲೇ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಸುಮಾರು 6 ಲಕ್ಷಕ್ಕೂ ಹೆಚ್ಚು ಲಾರಿಗಳು ಸೇವೆಯನ್ನು ಮಧ್ಯ ರಾತ್ರಿಯಿಂದಲೇ ಸ್ಥಗಿತಗೊಳಿಸಲಿದ್ದು, ಹಲವು ಸೇವೆಗಳಿಗೆ ಬಂದ್ ಬಿಸಿ ತಟ್ಟಲಿದೆ.

ಪೆಟ್ರೋಲ್, ಡೀಸೆಲ್ ಹಾಗೂ ಟೋಲ್ ದರಗಳ ಪರಿಷ್ಕರಣೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳ ಲಾರಿ ಮಾಲೀಕರು, ಪೆಟ್ರೋಲ್ ಬಂಕ್‌ಗಳ ಮಾಲೀಕರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಹಿಂಪಡೆಯುವುದಿಲ್ಲ. ವಾಣಿಜ್ಯ ಸೇರಿದಂತೆ ಎಲ್ಲ ಸೇವೆಗಳು ಸ್ತಬ್ಧವಾಗಲಿವೆ ಎಂದು ಜಿ.ಆರ್.ಷಣ್ಮುಖಪ್ಪ ಅವರು ತಿಳಿಸಿದ್ದಾರೆ.

 

Share This Article
error: Content is protected !!
";