ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯವನ್ನು ಕೆ.ಆರ್.ಎಸ್. ಮಾದರಿಯಲ್ಲಿ ಪ್ರವಾಸಿ ತಾಣವನ್ನಾಗಿ ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದ್ದು, ಹಿರಿಯೂರು ಪಟ್ಟಣದ ವಿವಿಪುರ ಕ್ರಾಸ್‍ನಿಂದ ವಿವಿಪುರ ಗ್ರಾಮದ ಕಣಿವೆ ಮಾರಮ್ಮ ದೇವಸ್ಥಾನದವರೆಗೆ ಇರುವ 17.50 ಕಿ.ಮೀ ರಸ್ತೆಯನ್ನು ಅಗಲೀಕರಣ ಮಾಡಲು ಅಗತ್ಯ ಕ್ರಮವಹಿಸುವಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು, ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯವನ್ನು ಕೆ.ಆರ್.ಎಸ್. ಮಾದರಿಯಲ್ಲಿ ಪ್ರವಾಸಿ ತಾಣವನ್ನಾಗಿ ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದ್ದು, ಈ ಸಂಬಂಧ ಮೊದಲನೇ ಹಂತದಲ್ಲಿ ವಿವಿಪುರ ಕ್ರಾಸ್‍ನಿಂದ ವಿವಿಪುರ ಗ್ರಾಮದವರೆಗೆ ಹಾಲಿ ಇರುವ ದ್ವಿ ಪಥದ ರಸ್ತೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಕೈಗೊಳ್ಳಬೇಕಾದ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಚಾಲನೆ ನೀಡಲು ತಿಳಿಸಿದರು.
ಪ್ರಸ್ತುತ ಈ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು, ಭೂಸ್ವಾಧೀನಕ್ಕೆ ತಗಲಬಹುದಾದ ವೆಚ್ಚವನ್ನು ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಳಿಸಲು ಮತ್ತು ನಾಲ್ಕು ಪಥದ ರಸ್ತೆ ನಿರ್ಮಾಣ ಮತ್ತು ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿಗಳನ್ನು ಜಲ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ಬರುವ ವಿಶ್ವೇಶ್ವರಯ್ಯ ಜಲ ನಿಗಮದಿಂದ ಕೈಗೆತ್ತಿಕೊಳ್ಳಲು ಮತ್ತು ಈ ಪ್ರಸ್ತಾವನೆಗೆ ಆಗಬಹುದಾದ ವಿಸ್ತೃತವಾದ ಯೋಜನಾ ವರದಿಯನ್ನು ತಯಾರಿಸಲು ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಯಿತು.
ಭೂಸ್ವಾಧೀನ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಸಹಕಾರದೊಂದಿಗೆ ಜಂಟಿ ಸರ್ವೇ ಮಾಡಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲು ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯ ನಾರಾಯಣ, ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೃಷ್ಣಮೂರ್ತಿ.ಬಿ.ಕುಲಕರ್ಣಿ, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಎಫ್.ಹೆಚ್.ಲಂಬಾಣಿ, ಕಾರ್ಯಪಾಲಕ ಇಂಜಿನಿಯರ್ ಬಾರಿಕರ ಚಂದ್ರಪ್ಪ, ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಹಿರಿಯೂರು ತಹಸೀಲ್ದಾರ್ ರಾಜೇಶ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.