ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕಳೆದ ಒಂದೂವರೆ ದಶಕಗಳಿಂದ ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ತವರು ಜಿಲ್ಲೆ ಬಳ್ಳಾರಿಗೆ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ
, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕೊನೆಗೂ ಅನುಮತಿ ನೀಡಿದೆ.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ಹೋಗದಂತೆ ಹೇರಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್​ ಸೋಮವಾರ ಅನುಮತಿ ನೀಡುವ ಮೂಲಕ ಜನಾರ್ಧನರೆಡ್ಡಿ ಅವರಿಗೆ ಬಹುದೊಡ್ಡ ರಿಲೀಫ್ ಸಿಕ್ಕಿದೆ.

ಸುಪ್ರೀಂಕೋರ್ಟ್ ಸೋಮವಾರ ಜನಾರ್ಧನರೆಡ್ಡಿ ಅವರು ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದ್ದು ಬಳ್ಳಾರಿಯ ಅಭಿಮಾನಿಗಳು, ಕಾರ್ಯಕರ್ತರು, ಸ್ನೇಹಿತರಲ್ಲಿ ಸಂಚಲನ ಉಂಟಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಜಾಮೀನು ನೀಡುವಾಗ ಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ನಿರ್ಬಂಧ ಹೇರಿತ್ತು.

ಆದ್ದರಿಂದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡಿದ್ದರು, ಅಲ್ಲದೆ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಗಂಗಾವತಿ ಮತ್ತು ಬೆಂಗಳೂರಿನ ಪಾರಿಜಾತನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದರು.

 ಜನಾರ್ದನ ರೆಡ್ಡಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ಹಾಕಿದ್ದ ಷರತ್ತುಗಳನ್ನು ಸಡಿಲಿಸಿದೆ. ಆದ್ದರಿಂದ ಅವರು ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದು. ಅಲ್ಲಿರುವ ತಮ್ಮ ಐಷಾರಾಮಿ ನಿವಾಸದಲ್ಲಿ ವಾಸ್ತವ್ಯ ಹೂಡಬಹುದು.

ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಣಿ ವಿವಾಹದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಅನುಮತಿ ಪಡೆದು ಬಳ್ಳಾರಿಯ ನಿವಾಸಕ್ಕೆ ಭೇಟಿ ನೀಡಿದ್ದರು. ವಿವಾಹದ ಕಾರಣ 10ಕ್ಕೂ ಹೆಚ್ಚು ದಿನಗಳ ಕಾಲ ಅವರು ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲು ಕೋರ್ಟ್ ಅನುಮತಿ ನೀಡಿದನ್ನು ಸ್ಮರಿಸಬಹುದಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಜನಾರ್ದನ ರೆಡ್ಡಿ ಅವರನ್ನು 2011ರ ಸೆ. 5 ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಜನಾರ್ಧನ ರೆಡ್ಡಿ ಆಂಧ್ರ ಪ್ರದೇಶದ ಚರ್ಲಪಲ್ಲಿ ಜೈಲು ಸೇರಿದ್ದರು.

ನಂತರ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶ ಸಾಧ್ಯತೆ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ ಪ್ರದೇಶಗಳಾದ ಬಳ್ಳಾರಿ, ಅನಂತಪುರ ಮತ್ತು ಕರ್ನೂಲು ಜಿಲ್ಲೆಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ 13 ವರ್ಷಗಳಿಂದ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ದೂರವಿದ್ದರು. ಈಗ ಆ ನಿರ್ಬಂಧ ಸಡಲವಾಗಿದ್ದು ರಾಜಕೀಯದಲ್ಲಿ ಸಂಚಲನ ಸೃಷ್ಠಿಯಾಗಲಿದೆ ಎನ್ನಲಾಗಿದೆ.

- Advertisement -  - Advertisement - 
Share This Article
error: Content is protected !!
";