ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಶಾಸಕರಾದ ಡಾ.ಟಿ.ಬಿ.ಜಯಚಂದ್ರ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಮಾಡಿದರು.
ಎತ್ತಿನಹೊಳೆ ಯೋಜನೆಯಿಂದ ಶಿರಾ ತಾಲ್ಲೂಕಿಗೆ ಹಂಚಿಕೆಯಾಗಿರುವ 0.514 ಟಿ.ಎಂ.ಸಿ ನೀರಿನ ಸದ್ಬಳಕೆ ಮತ್ತು ಯೋಜನೆ ಅನುಷ್ಠಾನಗೊಳಿಸುವ ಮತ್ತು ಯೋಜನೆ ರೂಪಿಸುವ ಸಂಬಂಧ ಈ ಹಿಂದಿನ ಸಮನ್ವಯ ಸಮಿತಿ ಸಭೆಯಲ್ಲಿ (ಜೂನ್ ಮತ್ತು ಆಗಸ್ಟ್) ಮಂಡಿಸಿ ತಿರ್ಮಾನಿಸಿದ ನಡವಳಿಗಳ ಕುರಿತು ಕೈಗೊಳ್ಳಲಾದ ಕ್ರಮಗಳ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಸಲುವಾಗಿ ವಿಶ್ವೇಶ್ವರಯ್ಯ ಜಲ ನಿಗಮ ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಾಲೋಚನೆ ನಡೆಸಿದರು.
ಎತ್ತಿನಹೊಳೆ, ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಿ ನಿಗದಿ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಶಾಸಕರಾದ ಡಾ.ಟಿ.ಬಿ.ಜಯಚಂದ್ರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರದ ಅಪರ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಂಜುಂ ಪರ್ವೆಜ್, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿವೃತ್ತ ಕಾರ್ಯಪಾಲಕ ಅಭಿಯಂತರಾದ ಗೋಪಿಕುಂಟೆ ಈಶ್ವರಯ್ಯ, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಾಗೇಂದ್ರ ಪ್ರಸಾದ್, ಸಣ್ಣ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಆನಂದ್, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಸುಜಾತಾ ಜಾದವ್, ತುಮಕೂರು ವಲಯದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಾರ್ಯಪಾಲಕ ಎಂಜಿನಿಯರ್ ಮುರಳೀಧರ್, ವಿಶ್ವೇಶ್ವರಯ್ಯ ಜಲ ನಿಗಮ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಶಿರಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸಂದೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.