ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಎರಡು ಅಪಘಾತಗಳಲ್ಲಿ 14 ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸೇರಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 3 ಲಕ್ಷ ಪರಿಹಾರ ರೂ. ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೋದಿ ಸಂತಾಪ, 2 ಲಕ್ಷ ಪರಿಹಾರ ಘೋಷಣೆ-
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರದ ಬಳಿ ಇಂದು ಬೆಳಗ್ಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 10 ಜನ ಮೃತಪಟ್ಟಿದ್ದರು. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೇ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಈಗಾಗಲೇ 3 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಲಾಗಿದ್ದು ಒಟ್ಟು ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ದೊರೆಯಲಿದೆ.
ಇದೇ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ 10 ಜನರು ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ರಸ್ತೆ ದುರಂತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ದುರ್ಮರಣಕ್ಕೆ ತುತ್ತಾಗಿರುವುದು ನನಗೆ ಅತೀವ ನೋವುಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಬಸವರಾಜ ಬೊಮ್ಮಾಯಿ ಸಂತಾಪ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಲಾರಿ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತು ಜನರು ದುರಂತ ಸಾವಿಗೀಡಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ.
ಈ ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು, ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸುತ್ತೇನೆ.
ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.