ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್‌ಅನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಜೆಟ್‌ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ, ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಆಗಿದೆ ಎಂದು ಸಿಎಂ ತಿಳಿಸಿದರು.
ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಗ್ಗೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ ಮೇಲೆಯೂ ವಿಪಕ್ಷಗಳಶಾಸಕರು ಸದನದಲ್ಲಿ ಪುನ: ಅದನ್ನೇ ಪ್ರಸ್ತಾಪಿಸುವುದು ತರವಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಇಂತಹ ಪ್ರಕರಣದಲ್ಲಿ ಯಾರೇ ತೊಂದರೆಗೆ ಒಳಗಾಗಿದ್ದರೂ ಅವರಿಗೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಸದಸ್ಯರು ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವುದು ನೋವಿನ ವಿಚಾರ. ರಾಜ್ಯದ ಕೋಟ್ಯಂತರ ಜನರ ಆಶೋತ್ತರಗಳನ್ನು, ದುಃಖ ದುಮ್ಮಾನಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಿರುವುದು ನಮ್ಮ ಕರ್ತವ್ಯ. ಇದಕ್ಕೆ ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ನಮ್ಮ ಜೊತೆ ಸಹಕರಿಸಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.