ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ. ಪುಲ್ವಾಮ ದಾಳಿಯ ಬಳಿಕ ಕೇಂದ್ರ ಸರ್ಕಾರ ವಿರಮಿಸಬಾರದಿತ್ತು. ಮೂರನೇ ಘಟನೆ ನಡೆಯದಂತೆ ಎಚ್ಚರ ವಹಿಸಬೇಕಿತ್ತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಉಗ್ರರ ದಾಳಿಯಲ್ಲಿ ಸಾವ ಕಂಡಿರುವ ಮೃತ ಕುಟುಂಬಸ್ಥರ ಜೊತೆ ನಾವಿದ್ದು, ಎಲ್ಲರಿಗೂ 10 ಲಕ್ಷ ರೂ ಪರಿಹಾರ ಕೊಟ್ಟಿದ್ದೇವೆ. ಬಹಳ ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರಿಗೂ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ತಿಳಿಸಿದರು.
ಉಗ್ರರು ಎಲ್ಲೇ ಇರಲಿ, ಯಾವ ರಾಜ್ಯದಲ್ಲಿಯೇ ಇರಲಿ, ಯಾವ ಜಾತಿ-ಧರ್ಮದವರೇ ಆಗಿರಲಿ, ಅವರನ್ನು ಮಟ್ಟ ಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಉಗ್ರರನ್ನು ಬೆಳೆಯಲು ಹಾಗೂ ಅವರ ಚಟುವಟಿಕೆಯನ್ನು ಮಾಡಲು ಅವಕಾಶ ಕೊಡಬಾರದು ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದರು.
ಇದೇ ವೇಳೆ ಮೇಕೆದಾಟು ವಿಚಾರ ಕುರಿತು ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕಿರುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರ ಇಂದು ಅನುಮತಿ ಕೊಟ್ಟರೆ ನಾಳೆಯಿಂದಲೇ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದರಲ್ಲದೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಕೊಟ್ಟಿಲ್ಲ, ಇದಕ್ಕೆ ರಾಜಕೀಯ ದ್ವೇಷ ಕಾರಣ ಎನಿಸುತ್ತದೆ ಎಂದು ಮುಖ್ಯಮಂತ್ರಿಗಳು ಆರೋಪಿಸಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯದಿಂದ ಈ ದಾಳಿ ನಡೆದಿದೆ. ಒಂದು ದಿನದಲ್ಲಿ ಮಾಡಿರುವ ದಾಳಿ ಇದಲ್ಲ. ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ಮಾಡಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಆಗ್ರಹ ಮಾಡಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಅವರು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಸಂಪುಟಸಭೆಯಲ್ಲಿ ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಬೆಂಗಳೂರಿನಿಂದ ಹೊರಗೆ ನಡೆಯುತ್ತಿರುವ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದ್ದು, ಇತಿಹಾಸದ ಪುಟ ಸೇರಲಿದೆ ಎಂದು ಪರಮೇಶ್ವರ್ ತಿಳಿಸಿದರು.