ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೊಲೀಸ್ ಇಲಾಖೆಯ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಕೋರಿದರೆ ಕಡ್ಡಾಯವಾಗಿ ಮಂಜೂರು ಮಾಡಬೇಕು ಎಂದು ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಎಲ್ಲಾ ಘಟಕಾಧಿಕಾರಿಗಳಿಗೆ ಆದೇಶ ನೀಡಿ ಸಹಿ ಸುತ್ತಿ ನೀಡಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿ ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿರುತ್ತದೆ.
ಅಂಥ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು ಹಾಗೂ ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.
ಇದರಿಂದ ಸಿಬ್ಬಂದಿಯ ಮನೋಬಲ ವೃದ್ಧಿಯಾಗಿ, ಒತ್ತಡ ಕಡಿಮೆಯಾಗುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜತೆಗೆ ನಿಷ್ಠೆಯನ್ನು ಬೆಳೆಸುತ್ತದೆ. ಪೊಲೀಸ್ ಪಡೆಯ ಬದ್ಧತೆ ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ.
ಆದ್ದರಿಂದ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತಪ್ಪದೆ ರಜೆ ಮಂಜೂರು ಮಾಡಬೇಕು ಎಂದು ಘಟಕಾಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.

