ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಅಭಿವೃದ್ಧಿ ವೇಗವನ್ನು ಚುರುಕುಗೊಳಿಸುವಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಮಹಾತ್ಮ ಗಾಂಧಿಯವರು ಹೇಳಿದಂತೆ ಕಟ್ಟಕಡೆಯ ವ್ಯಕ್ತಿಗೆ ಯೋಜನೆಗಳನ್ನು ತಲುಪಿಸುವಲ್ಲಿ ಸರ್ಕಾರ ಬದ್ದವಾಗಿದೆ ಎಂದು ಗೌರವಾನ್ವಿತ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಆರಂಭವಾದ ವಿಧಾನಮಂಡಲದ ಅಧಿವೇಶನದ ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಕರ್ನಾಟಕ ಮಾದರಿ ಅಭಿವೃದ್ಧಿಯೆಂದರೆ ಜನಕೇಂದ್ರಿತ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಆಡಳಿತವನ್ನು ರೂಪಿಸುವುದು ಎಂದರ್ಥ. ಹಸಿರು ಇಂಧನ, ಮಹಿಳಾ ಸಬಲೀಕರಣ ಮುಂತಾದವುಗಳೂ ಇದರಲ್ಲಿ ಸೇರುತ್ತವೆ. ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ. ಆಕ್ಸ್‍ಫರ್ಡ್ ವಿಶ್ವವಿದ್ಯಾಲಯವು ಹ್ಯೂಮನ್ ರೈಟ್ಸ್ ಹಬ್‍ನ ಬ್ಲಾಗ್‍ನಲ್ಲಿ “ಶೈನಿಂಗ್ ಎ ಲೈಟ್ ಇನ್ ದ ಡಾರ್ಕ್ನೆಸ್” ಎಂದು ಮತ್ತು “ಎ ಬ್ಲ್ಯೂ ಪ್ರಿಂಟ್ ಫಾರ್ ದ ವಲ್ರ್ಡ್” ಎಂದು ಈ ಮಾದರಿಯನ್ನು ವ್ಯಾಖ್ಯಾನಿಸಿವೆ. ಈ ಪ್ರಮೇಯದ ಕುರಿತು ತಿಳಿದುಕೊಳ್ಳಲು ವಿಶ್ವ ಸಂಸ್ಥೆಯ ಮುಖ್ಯಸ್ಥರೆ ರಾಜ್ಯಕ್ಕೆ ಬಂದು ನಮ್ಮ ಯೋಜನೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ ಎಂದು ಹೇಳಿದರು.
ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಗಳಿಂದಾಗಿ ರಾಜ್ಯದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಪ್ರತಿಯೊಂದು ವಲಯದಲ್ಲೂ ರಾಜ್ಯವು ಉತ್ತಮವಾದ ಸಾಧನೆಗಳನ್ನು ದಾಖಲಿಸಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಜಿಎಸ್‍ಟಿ ಬೆಳವಣಿಗೆ ದರ ಉತ್ತಮವಾಗಿದೆ.
2024-25ನೇ ಸಾಲಿನ ಬಜೆಟ್‍ನಲ್ಲಿ ಆದೇಶ ಹೊರಡಿಸಬೇಕಾಗಿದ್ದ 344 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಘೋಷಣೆ ಮಾಡಿದ್ದ ಕಾರ್ಯಕ್ರಮಗಳೂ ಸಹ ಸಮರ್ಪಕವಾಗಿ ಅನುಷ್ಠಾನವಾಗುತ್ತಿವೆ. ಇನ್ನುಳಿದ ಘೋಷಣೆಗಳೂ ಆದೇಶ ಹೊರಡಿಸುವ ಹಂತದಲ್ಲಿವೆ ಎಂದು ತಿಳಿಸಿದರು.