ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸಲ್ಲ. ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿ, ಬೀದರ್ನ ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರಿಲ್ಲ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆದಾಗ್ಯೂ ಯಾವುದೇ ವಿಚಾರಣೆಗೆ ಸಿದ್ಧವಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ರಾಜಕೀಯ ದ್ವೇಷದಿಂದ ವಿಪಕ್ಷಗಳು ಆರೋಪ ಮಾಡುತ್ತಿವೆ. ಇಂತಹುದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪ ಅವರ ಹೆಸರನ್ನು ಡೆತ್ ನೋಟ್ನಲ್ಲಿ ಬರೆಯಲಾಗಿತ್ತು ಎಂದು ಅವರು ಸಮರ್ಥಿಸಿಕೊಂಡರು.
ಪಕ್ಷದ ವರಿಷ್ಠರೊಂದಿಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.
ಸಿಬಿಐಗೆ ವಹಿಸಲ್ಲ: ರಾಜ್ಯ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ, ಸಿಬಿಐಗೆ ಪ್ರಕರಣ ವಹಿಸಲ್ಲ ಎಂದು ತಿರುಗೇಟು ನೀಡಿದರು.
ಸಿ.ಟಿ.ರವಿ ಪ್ರಕರಣ ಸಿಐಡಿಗೆ: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯವರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿ.ಟಿ.ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿರುವ ಬಗ್ಗೆ ಎಫ್ಎಸ್ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು ಸಿ.ಟಿ.ರವಿ ಅವರ ಮೇಲೆ ದೂರು ದಾಖಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.