ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ದೊಡ್ಡದು- ನ್ಯಾಯಾಧೀಶ ವಿಜಯ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಬಹಳ ಪ್ರಮುಖವಾಗಿದ್ದು, ಕಾರ್ಮಿಕ ವರ್ಗ ದೇಶದ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ವಿಮಾ ಯೋಜನೆ ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯನಿಧಿ ಸಂಘಟನೆ ಇವರುಗಳ ಸಂಯುಕ್ತಾಶ್ರಯದಲ್ಲಿ ” ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರುಗಳಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಹಾಗೂ ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಅರಿವು ಕಾರ್ಯಾಗಾರ” ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕ ಇಲಾಖೆಯ ಯೋಜನೆಗಳು, ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಅರ್ಹ ಕಾರ್ಮಿಕರು ತಪ್ಪದೇ ನೋಂದಣಿ ಮಾಡಿಸಿಕೊಳ್ಳಬೇಕು. ಕಾರ್ಮಿಕರು ನೊಂದಣಿ ಮಾಡಿಕೊಳ್ಳದಿದ್ದರೆ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.  ಹೀಗಾಗಿ ಕಾರ್ಮಿಕರು ಇಲಾಖೆಯ ಸೌಲಭ್ಯಗಳು, ಯೋಜನೆಗಳ, ಕಾರ್ಮಿಕ ಕಾನೂನುಗಳ ಕುರಿತು ಮಾಹಿತಿ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಕಾರ್ಮಿಕ ಇಲಾಖೆಯ ಯೋಜನೆಗಳು, ಸೌಲಭ್ಯಗಳು ಕುರಿತು ಅರಿವು ಹೊಂದುವುದು ಅಗತ್ಯ. ಇದರಿಂದ ಕಾರ್ಮಿಕರು ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ. ಅರ್ಹ ಕಾರ್ಮಿಕರಿಗೆ ಇಲಾಖೆಯ ಸೌಲಭ್ಯ ದೊರೆಯುವಂತೆ ಕಾರ್ಮಿಕ ಸಂಘಟನೆಗಳು ನೋಡಿಕೊಳ್ಳಬೇಕು ಎಂದು ಹೇಳಿದರು.

ದೇಶ ಕಾಯುವ ಸೈನಿಕರು, ಅನ್ನ ನೀಡುವ ರೈತರಂತೆ ಕಾರ್ಮಿಕರು ಸಹ ದೇಶಕ್ಕೆ ಬಹಳ ಮುಖ್ಯ. ಕಾರ್ಮಿಕರಿಗೆ ಉತ್ತಮ ಸೌಲಭ್ಯ ದೊರೆತರೆ ಕಾರ್ಮಿಕ ಕಲ್ಯಾಣದ ಜತೆಗೆ ದೇಶದ ಕಲ್ಯಾಣವಾಗಲಿದೆ ಎಂದು ಹೇಳಿದರು.

ಬಳ್ಳಾರಿ- ದಾವಣಗೆರೆ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ್ ನಾಯ್ಕ್ ಮಾತನಾಡಿ, ಕಾರ್ಮಿಕ ವರ್ಗ ದೇಶದ ಬೆನ್ನೆಲುಬು. ಕಾರ್ಮಿಕರ ಕೆಲಸದಿಂದ ದೇಶದ ಆರ್ಥಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ಲಭಿಸುತ್ತಿದೆ ಎಂದು ಹೇಳಿದರು.
ಅರ್ಹ ಕಾರ್ಮಿಕರೆಲ್ಲರೂ ಇಲಾಖೆಯ ಸೌಲಭ್ಯ, ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಉದ್ದಿಮೆದಾರರಿಗೂ ಕಾರ್ಮಿಕ ಕಾಯ್ದೆಗಳ ಕುರಿತು ಮಾಹಿತಿ ಇರಬೇಕು. ಜತೆಗೆ ಅವರ ಕರ್ತವ್ಯಗಳ ಬಗ್ಗೆ ತಿಳಿದುಕೊಂಡಿರಬೇಕು. ಕಾರ್ಮಿಕ ವರ್ಗ ಹಾಗೂ ಮಾಲೀಕ ವರ್ಗದವರ ನಡುವೆ ಸಮನ್ವಯತೆ ಸಾಧಿಸಲು ಕಾರ್ಮಿಕ ಕಾಯ್ದೆಗಳು ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಇರಬೇಕು. ಈ ಕಾರ್ಯಾಗಾರದ ಸಂಪೂರ್ಣ ಸದುಪಯೋಗ ಪಡೆದುಕೊಂಡರೆ ಕೈಗಾರಿಕಾ ಬಾಂಧವ್ಯ ವೃದ್ಧಿಯಾಗಲಿದೆ ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ಮಾತನಾಡಿ, ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹೊಸ ಹೊಸ ಯೋಜನೆಗಳು, ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಇವುಗಳ ಕುರಿತು ಕಾರ್ಮಿಕರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ, ಕಾರ್ಮಿಕ ಇಲಾಖೆಯ ಯೋಜನೆಗಳು, ಸೌಲಭ್ಯಗಳ ಕುರಿತು ಪರಿಚಯಿಸುವ ಸಲುವಾಗಿ ಪ್ರತಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರಿವು ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕರ ಭವಿಷ್ಯನಿಧಿ ಇಲಾಖೆಯ ಅಧಿಕಾರಿ ಹಾಗೂ ಸಂಪನ್ಮೂಲ ವ್ಯಕ್ತಿ ವೇಣುಗೋಪಾಲ್, ಕಾರ್ಮಿಕ ನಿರೀಕ್ಷಕರಾದ ರಾಜಣ್ಣ, ಅಲ್ಲಾಭಕ್ಷಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಸೇರಿದಂತೆ ಸಂಘಟಿತ, ಅಸಂಘಟಿತ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಕಾರ್ಮಿಕ ಇಲಾಖೆ ಸಿಬ್ಬಂದಿ ಇದ್ದರು.

- Advertisement -  - Advertisement - 
Share This Article
error: Content is protected !!
";