ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ರದ್ದುಪಡಿಸಿ ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ಹೈಕೋರ್ಟ್ ನಿರ್ದೇಶನ ನೀಡಿದೆ.
ಕೋಲಾರದ ಮಾಲೂರು ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಕೆ.ವೈ.ನಂಜೇಗೌಡ ಆಯ್ಕೆ ಆಗಿರುವುದನ್ನು ಅನೂರ್ಜಿತಗೊಳಿಸುವಂತೆ ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ ಮರು ಮತ ಎಣಿಕೆಗೆ ಸೂಚನೆ ನೀಡಿದೆ. ಇನ್ನು ಇದೇ ವೇಳೆ ನಂಜೇಗೌಡ ಪರ ವಕೀಲೆ ನಳಿನಾ ಮಾಯಗೌಡ ಅವರು ಈ ತೀರ್ಪಿಗೆ ಮಧ್ಯಂತರ ತಡೆ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಕೋರ್ಟ್ ಸಹ ಪುರಸ್ಕರಿಸಿ 1 ತಿಂಗಳ ಕಾಲ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಆದೇಶಿಸಿದೆ. ಇದರಿಂದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಮಾಲೂರು ಕ್ಷೇತ್ರದ ಮತ ಎಣಿಕೆ ಕಾರ್ಯದ ದೃಶ್ಯಾವಳಿಗಳನ್ನು ಚಿತ್ರೀಕರಿಸಿ ಶೇಖರಿಸಿಟ್ಟಿರುವ ಹಾರ್ಡ್‌ಡಿಸ್ಕ್ ಅನ್ನು ಮೆ.ಐಕಿಯಾ ಬಿಸಿನೆಸ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ ಪಡೆಯಲಾಗಿದೆಯೇ, ಇಲ್ಲವೇ ಎಂಬ ಬಗ್ಗೆ ವಿವರಣೆ ನೀಡಿ, ಪ್ರಮಾಣ ಪತ್ರ ಸಲ್ಲಿಸುವಂತೆ ಅಂದಿನ ಕೋಲಾರ ಜಿಲ್ಲಾ ಚುನಾವಣಾಧಿಕಾರಿ ವೆಂಕಟರಾಜು ಅವರಿಗೆ ಕೋರ್ಟ್ ಸೂಚನೆ ನೀಡಿದೆ.
ಏನಿದು ಪ್ರಕರಣ:
2023ರ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು(ಪರಾಜಿತ ಅಭ್ಯರ್ಥಿ), ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆ ಮಾಡಲಾಗಿದೆ.
ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಹೀಗಾಗಿ, ನಂಜೇಗೌಡರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮವನ್ನು ರದ್ದುಪಡಿಸಬೇಕು. ಅಷ್ಟೇ ಅಲ್ಲದೆ, ಕ್ಷೇತ್ರದ ಮತಗಳನ್ನು ಮರು ಎಣಿಕೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.
ಅರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ ಅವರು 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಅವರ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿದ್ದರು.

