ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಇದೇ ಮಾರ್ಚ್ 27ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ವಿಚಾರಣೆ ನಡೆಸಲು ಉದ್ದೇಶಿಸಿದೆ.
ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬಹುದು.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಚ್ 27ರಂದು ಸಾರ್ವಜನಿಕರಿಂದ ದೂರುಗಳು, ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ.
ಸಾರ್ವಜನಿಕರು ನಿಗದಿತ ದಿನಾಂಕದಂದು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.