ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯಕ್ಕೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೇ 28ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಮಾರುತಗಳು ಬಲವಾಗಿದ್ದರೆ, ಅದೇ ದಿನ ಕರ್ನಾಟಕದ ಕರಾವಳಿ ಭಾಗಕ್ಕೂ ಪ್ರವೇಶಿಸಲಿದೆ. ಮಾರುತಗಳು ದುರ್ಬಲವಾಗಿದ್ದರೆ ಒಂದೆರಡು ದಿನದಲ್ಲಿ ರಾಜ್ಯಕ್ಕೆ ಬರಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.