ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮುಂಬರುವ ಸಂಸತ್‌ಅಧಿವೇಶನದಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರದ ಕ್ಯಾಬಿನೆಟ್‌ಸಭೆ ಪ್ರಸ್ತಾವಿತ ಮಸೂದೆಗೆ ಒಪ್ಪಿಗೆ ನೀಡಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ವರ್ಷದ ಮಾರ್ಚ್-14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. ಈ ವರದಿಗೆ ಸಂಪುಟ ಅನುಮೋದನೆ ನೀಡಿದೆ.
191 ದಿನಗಳ ಸಮಯವನ್ನು ತೆಗೆದುಕೊಂಡು ಅಧ್ಯಯನ ನಡೆಸಿದ್ದ ಸಮಿತಿ 18,000ಕ್ಕೂ ಅಧಿಕ ಪುಟಗಳ ವರದಿ ತಯಾರಿಸಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ ಸಂಗ್ರಹಿಸಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ.
ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ. ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತಿದೆ.
ಬಹಳ ಹಿಂದಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ. ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಇದ್ದರು.