ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆ ಉದ್ಘಾಟಿಸಿದರು.
ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್ಎನ್ ಚನ್ನಬಸಪ್ಪ, ಡಿಎಸ್ ಅರುಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಾಗರ ತಾಲ್ಲೂಕಿನ ಅಂಬರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ಈ ಸೇತುವೆಯನ್ನು 472 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಸೇತುವೆಯು 2.44 ಕಿಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. ಈ ಸೇತುವೆಯು ಸಾಗರದಿಂದ ಸಿಗಂದೂರಿನ ಸುತ್ತಮುತ್ತಲಿನ ಹಳ್ಳಿಗಳಿಗೆ ದೂರವನ್ನು ಕಡಿಮೆ ಮಾಡುತ್ತದೆ.ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿರುವ ಅವರು, ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು.
ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.