ಸತೀಶ್ ಜಾರಕಿಹೊಳಿ ಜೊತೆ ರಾಜಕೀಯ ಚರ್ಚೆ ನಡೆದಿಲ್ಲ-ವಿಜಯೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಬಿಗಿಯಾಗುತ್ತಿರುವಂತೆ ಕಾಣುತ್ತಿದೆ. ಇನ್ನೊಂದೆಡೆ ಜಾತಿ ಗಣತಿ ಮುನ್ನೆಲೆಗೆ ಬಂದಿದೆ. ಇದರ ಮಧ್ಯ ಹಲವು ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿದ್ದು ಸರ್ಕಾರ ಏನುಬೇಕಾದರೂ ಆಗಬಹುದು ಎನ್ನುವಂತಾಗಿದೆ.

ಕಾಂಗ್ರೆಸ್ ಪಕ್ಷದ ಒಂದು ಗುಂಪು ದಲಿತ ಸಿಎಂ ದನಿ ಎತ್ತಿದ್ದು ಚರ್ಚೆ ಜೋರಾಗಿ ನಡೆಯುತ್ತಿರುವಂತೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಪವರ್ ಸೆಂಟರ್ ಆಗಿ ಬದಲಾಗಿದೆ. ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

 ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅನೇಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ನಿನ್ನೆ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದರು.

ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರೈತರು ಹಾಗೂ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿರುವ ರಾಜ್ಯ ಹೆದ್ದಾರಿಯಲ್ಲಿನ ಎರಡು ಟೋಲ್‌ಗಳನ್ನು ಸ್ಥಳಾಂತರಿಸುವಂತೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್‌ಗಳಿವೆ. ಇದರಿಂದ ರೈತರು ಹಾಗೂ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗಿದೆ. ಟೋಲ್ ಬದಲಾಯಿಸುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆಯುವುದಾಗಿ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

 ಮುಡಾ ಹಗರಣ ಕುರಿತು ಪಾರದರ್ಶಕ ತನಿಖೆ ನಡೆಯಬೇಕೆಂದು ಒತ್ತಾಯಿಸುತ್ತಿದ್ದೇವೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಮುಡಾ, ವಾಲ್ಮೀಕಿ ಹಗರಣದ ತನಿಖೆಯಾಗಬೇಕು. ಅವ್ಯವಹಾರ ನಡೆದಿದೆ ಎಂಬುದನ್ನು ಮುಖ್ಯಮಂತ್ರಿ ಸಾಬೀತು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 ಆದರೆ, ರಾಜ್ಯ ಸರ್ಕಾರದ ಪತನದ ಬಿಜೆಪಿ ನಾಯಕರ ಹೇಳಿಕೆಯನ್ನು ತಳ್ಳಿಹಾಕಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ, ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ರಾಜೀನಾಮೆ ಪ್ರಶ್ನೆಯೇ ಬರುವುದಿಲ್ಲ. ಸರ್ಕಾರ ಪತನವಾಗುವ ಅವಕಾಶವೇ ಇಲ್ಲ ಎಂದರು.

 

 

- Advertisement -  - Advertisement -  - Advertisement - 
Share This Article
error: Content is protected !!
";