ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಗರಣಗಳ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ನನ್ನ ವಿರುದ್ಧದ ಆರೋಪ ಕಪೋಲಕಲ್ಪಿತ. ವಕ್ಫ್ ಆಸ್ತಿ ದುರುಪಯೋಗದ ಕುರಿತು ಅನ್ವರ್ ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ.ಆನಂದ್ ಅವರು ವರದಿ ಕೊಟ್ಟಿದ್ದರು.
2016 ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಮಾಡಿದ್ದನ್ನು ಸಿದ್ದರಾಮಯ್ಯನವರ ಸಚಿವ ಸಂಪುಟ ತಿರಸ್ಕರಿಸಿತ್ತು,
ಮುಖ್ಯಮಂತ್ರಿಗಳಿಗೆ ಈಗ ಸಿಬಿಐ ಬಗ್ಗೆ ಬಹಳ ವಿಶ್ವಾಸ ಬಂದಂತೆ ಕಾಣುತ್ತಿದ್ದು, ಈ ಆಮಿಷದ ಗುರುತರ ಆರೋಪವನ್ನು ಸಿಬಿಐಗೆ ವಹಿಸಲಿ ಜತೆಗೆ ಅನ್ವರ್ ಮಾಣಿಪ್ಪಾಡಿ ಅವರ ವರದಿಯ ತನಿಖೆಯನ್ನೂ ಸಿಬಿಐಗೆ ನೀಡಲಿ ಎಂದು ಆಗ್ರಹಿಸುವ ಜತೆಗೆ ಸವಾಲು ಹಾಕುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.