ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಗಳೂರಿನಲ್ಲಿ ಕೊಲೆ ಆದವನು ರೌಡಿ ಶೀಟರ್ ಎನ್ನಲಾಗುತ್ತಿದೆ. ಸಮಗ್ರ ತನಿಖೆಗೆ ಸೂಚನೆ ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೊಲೆ ಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ.
ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?
ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕ್ರಣಗಳನ್ನೇ ಹುಡುಕುತ್ತಾರೆ. ಒಂದು ವಾರದಿಂದ ಪೆಹಲಗಾಂ ಪ್ರಕರಣದ ಬಗ್ಗೆ ಏನು ಹೇಳುತ್ತಾರೆ. ಉಗ್ರರ ದಾಳಿಗೆ 26 ಜನ ಸಾವನ್ನಪ್ಪಿದ್ದಾರೆ. ಪ್ರಧಾನಿಗಳು ಅಲ್ಲಿಗೆ ಭೇಟಿ ನೀಡಿದ್ದಾರೆಯೇ? ಬಿಜೆಪಿಯವರಿಗೆ ಪ್ರಧಾನಿ ಮೋದಿಯವರಿಗೆ ಇದು ಮುಖ್ಯ ಅನ್ನಿಸುತ್ತಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯ ಕಾರಣ-
ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದ ಸಿಎಂ ಕಾಶ್ಮೀರದಲ್ಲಿ ಒಬ್ಬ ಪೋಲಿಸ್ ಆಗಲಿ, ಭದ್ರತಾ ಪಡೆಯವರಾಗಲಿ ನಿಯೋಜಿಸಿಲ್ಲ. ಯಾರೂ ಇಲ್ಲ ಎಂದರೆ ಏನು ಅರ್ಥ? ನೂರಾರು ಪ್ರವಾಸಿಗರು ಭೇಟಿ ನೀಡುವ ಸ್ಥಳದಲ್ಲಿ ಪೊಲೀಸರು ಇರಬೇಕು ಎಂದರು.
ನನಗೂ ಬೆದರಿಕೆ ಕರೆ ಬಂದಿದೆ-
ವಿಧಾನಸಭಾಧ್ಯಕ್ಷ ಯು.ಟಿ .ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ನನಗೂ ಬೆದರಿಕೆ ಕರೆಗಳು ಬರುತ್ತವೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿ, ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.