ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಮ್ಮ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಯುವ ಸಮುದಾಯ ಮಹತ್ವದ ಪಾತ್ರವನ್ನು ವಹಿಸಬೇಕಾಗಿದೆ ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವೀರಾಪುರ ಗ್ರಾಮದಲ್ಲಿ ನಡೆಯುತ್ತಿರುವ ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಮ್ಮ ಗ್ರಾಮೀಣರು ತಮ್ಮ ಭಾವನೆಗಳನ್ನು ಜಾನಪದ ಕಲೆ ಮತ್ತು ಸಾಹಿತ್ಯದ ಮೂಲಕ ಅಭಿವ್ಯಕ್ತಿಗೊಳಿಸಿದರು. ಇಂತಹ ಜಾನಪದ ಕಲಾವಿದರನ್ನು ಗೌರವಿಸುವ ಮತ್ತು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಜನದರ ಕಲೆ ಮತ್ತು ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳ ಮಹತ್ವವಿದೆ ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ.
“ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ರಾಜ್ಯದ ಎಲ್ಲೆಡೆ ಕರ್ನಾಟಕ ಸುವರ್ಣ ಸಂಭ್ರಮದ ಆಚರಣೆ ನಡೆಯುತ್ತಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.
ಪ್ರಾಂಶುಪಾಲ ಎಂ.ಆನಂದ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅಭಿವ್ಯಕ್ತಿ ಪಡಿಸಿಕೊಂಡರೆ ಪ್ರತಿಭಾವಂತ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ.
ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಸಹಕಾರಿ ಆಗಲಿದೆ. ವಿದ್ಯಾರ್ಥಿಗಳು ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಕಲಾವಿದರುಗಳಾದ ಎಂ.ರಾಮಕೃಷ್ಣ, ಮುನಿರತ್ನಮ್ಮ, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿ ಸಫೀರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.